ಬಸ್‌ ಪ್ರಯಾಣ ದರ ಏರಿಕೆ ಇಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

Update: 2024-07-15 06:42 GMT

ʻಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ಸಹಿತ ನಾಲ್ಕೂ ನಿಗಮಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲʼ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ‌ ಸ್ಪಷ್ಟಪಡಿಸಿದ್ದಾರೆ.

ಕೆಎಸ್ಆರ್‌ಟಿಸಿ ನಿಗಮದ ಅಧ್ಯಕ್ಷ ಎಸ್ಆರ್ ಶ್ರೀನಿವಾಸ್ ಅವರು ಶನಿವಾರ ಬಸ್‌ ಪ್ರಯಾಣ ದರ ಏರಿಕೆ ಬಗ್ಗೆ ಮಾತನಾಡಿದ್ದರು. ʻʻಕೆಎಸ್‌ಆರ್‌ಟಿಸಿ ಬಸ್ ದರ ಹೆಚ್ಚಳವು ಅನಿವಾರ್ಯವಾಗಿದೆ. ಸರ್ಕಾರಕ್ಕೆ ಟಿಕೆಟ್‌ ದರ ಹೆಚ್ಚಳ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ತೈಲ ದರ ಏರಿಕೆಯಾಗಿರುವುದರಿಂದ ಟಿಕೆಟ್‌ ದರ ಹೆಚ್ಚಳವು ಅನಿವಾರ್ಯವಾಗಿದೆʼʼ ಎಂದು ಅವರು ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ʻʻಶ್ರೀನಿವಾಸ್ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ‌ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಆದರೆ, ಇವರೆಗೆ ಯಾವುದೇ ಪ್ರಸ್ತಾವನೆ ಸಲ್ಲಿಕೆ ಮಾಡಿಲ್ಲʼʼ ಎಂದು ತಿಳಿಸಿದರು.

ʻʻರಾಜ್ಯ ಸರ್ಕಾರಕ್ಕೆ ಸಾರಿಗೆ ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಸಂಬಂಧ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ. ಅಲ್ಲದೇ ಟಿಕೆಟ್ ದರ ಏರಿಸುವಂತಹ ಚಿಂತನೆಯನ್ನು ರಾಜ್ಯ ಸರ್ಕಾರ ನಡೆಸಿಲ್ಲʼʼ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸ್ಪಷ್ಪಪಡಿಸಿದರು.

ಆ ಮೂಲಕ ಸಾರಿಗೆ ಬಸ್‌ ಪ್ರಯಾಣ ದರ ಹೆಚ್ಚಳದ ಕುರಿತ ಚರ್ಚೆಗಳಿಗೆ ಸಚಿವರು ತೆರೆ ಎಳೆದರು.

Tags:    

Similar News