ಸದಾನಂದ ಗೌಡರ ಮುಂದಿನ ನಿರ್ಧಾರಕ್ಕೆ ನಮ್ಮ ಬೆಂಬಲ ಎಂದ ಒಕ್ಕಲಿಗರ ಸಂಘ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಸದಾನಂದ ಗೌಡರ ಕೋಪ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ಬಿಜೆಪಿಯೂ ಅವರನ್ನು ಸಮಾಧಾನಪಡಿಸಲು ವಿಫಲವಾದಂತೆ ಕಾಣಿಸುತ್ತಿದೆ. ಇತ್ತ ಸದಾನಂದ ಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.;

Update: 2024-03-19 12:51 GMT

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದ ಗೌಡ ಅವರು ಮುಂದಿನ ನಿರ್ಧಾರದ ಬಗ್ಗೆ ಮಂಗಳವಾರ ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ್ದಾರೆ.

ಒಕ್ಕಲಿಗರ ಸಂಘದ ಪ್ರಮುಖರೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ಮುಂದಿನ ನಿರ್ಧಾರದ ಕುರಿತು ಬುಧವಾರ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ. ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದು ಸದಾನಂದಗೌಡ ಹೇಳಿದ್ದಾರೆ.

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ʼʼಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ಅವರಿಗೆ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತಾರೆʼʼ ಎಂದಿದ್ದಾರೆ.

ʼʼಮೂರು ಪಕ್ಷಗಳಲ್ಲೂ ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆʼʼ ಎಂದು ಹನುಮಂತಯ್ಯ ಎಚ್ಚರಿಕೆ ನೀಡಿದರು.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಸದಾನಂದ ಗೌಡರ ಕೋಪ ತಣ್ಣಗಾಗುವಂತೆ ಕಾಣಿಸುತ್ತಿಲ್ಲ. ಬಿಜೆಪಿಯೂ ಅವರನ್ನು ಸಮಾಧಾನಪಡಿಸಲು ವಿಫಲವಾದಂತೆ ಕಾಣಿಸುತ್ತಿದೆ. ಇತ್ತ ಸದಾನಂದ ಗೌಡ ಅವರು ಕಾಂಗ್ರೆಸ್ ಸೇರುತ್ತಾರೆನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸದಾನಂದ ಗೌಡ ಅವರಿಗೆ ಯಾವ ಕ್ಷೇತ್ರದಿಂದ ಟಿಕೆಟ್‌ ನೀಡಬಹುದು ಎನ್ನುವ ವಿಚಾರದಲ್ಲಿ ಕಾಂಗ್ರೆಸ್‌ನಲ್ಲಿ ಗೊಂದಲವಿದೆ.

Tags:    

Similar News