ತೊಗರಿ ಖರೀದಿ ಕೇಂದ್ರ ತೆರೆಯಿರಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ತುರ್ತು ಪತ್ರ

ಮಾರುಕಟ್ಟೆಯಲ್ಲಿ ತೊಗರಿ ಧಾರಣೆ ಕ್ವಿಂಟಲ್‌ಗೆ 5,830 ರೂಪಾಯಿಯಿಂದ ರಿಂದ 6,700 ರೂಪಾಯಿ ರ ಆಸುಪಾಸಿನಲ್ಲಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ 8,000 ರೂಪಾಯಿ.

Update: 2025-12-09 06:43 GMT

ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ

Click the Play button to listen to article

ರಾಜ್ಯದಲ್ಲಿ ತೊಗರಿ ಬೆಳೆ ಕಟಾವಿಗೆ ಬಂದಿದ್ದು, ಬೆಲೆ ಕುಸಿತದಿಂದ ಕಂಗಾಲಾಗಿರುವ ರೈತರ ನೆರವಿಗೆ ಧಾವಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ತುರ್ತು ಪತ್ರ ಬರೆದಿದ್ದಾರೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಿಗೆ ಬರೆದಿರುವ ಪತ್ರದಲ್ಲಿ, ಕೂಡಲೇ ಬೆಂಬಲ ಬೆಲೆ (MSP) ಯೋಜನೆಯಡಿ ತೊಗರಿ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಒತ್ತಾಯಿಸಿದ್ದಾರೆ.

ಪ್ರಸ್ತುತ ಖಾರಿಫ್ ಹಂಗಾಮಿನಲ್ಲಿ (2025-26) ರಾಜ್ಯದಾದ್ಯಂತ ಸುಮಾರು 16.80 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬಿತ್ತನೆ ಮಾಡಲಾಗಿದ್ದು, 12.60 ಲಕ್ಷ ಮೆಟ್ರಿಕ್ ಟನ್‌ಗೂ ಅಧಿಕ ಇಳುವರಿ ನಿರೀಕ್ಷಿಸಲಾಗಿದೆ. ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳ ರೈತರಿಗೆ ತೊಗರಿ ಪ್ರಮುಖ ಆದಾಯದ ಮೂಲವಾಗಿದೆ. ಆದರೆ, ಮಾರುಕಟ್ಟೆಯಲ್ಲಿ ತೊಗರಿ ಧಾರಣೆ ಕ್ವಿಂಟಲ್‌ಗೆ 5,830 ರೂಪಾಯಿಯಿಂದ ರಿಂದ 6,700 ರೂಪಾಯಿ ರ ಆಸುಪಾಸಿನಲ್ಲಿದೆ. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ 8,000 ರೂಪಾಯಿ ಆಗಿದ್ದರೂ, ಮಾರುಕಟ್ಟೆ ದರ ಅದಕ್ಕಿಂತ ತೀರಾ ಕಡಿಮೆಯಿರುವುದು ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

ರಾಜ್ಯದ ಪ್ರಸ್ತಾಪ ತಿರಸ್ಕಾರ ಆರೋಪ

ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ತೊಗರಿ ಮಾರುಕಟ್ಟೆಗೆ ಬರುವ ಪ್ರಕ್ರಿಯೆ ಚುರುಕುಗೊಳ್ಳಲಿದೆ. ಆದರೆ, ಕೇಂದ್ರ ಸರ್ಕಾರ ಫೆಬ್ರವರಿ ಅಥವಾ ಮಾರ್ಚ್‌ನಲ್ಲಿ ಖರೀದಿ ಕೇಂದ್ರಗಳನ್ನು ತೆರೆಯುವ ಸಾಧ್ಯತೆಯಿದೆ. ಇದು ವಿಳಂಬವಾದರೆ ರೈತರು ಕಡಿಮೆ ಬೆಲೆಗೆ ಬೆಳೆಯನ್ನು ಮಾರಾಟ ಮಾಡಿ ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ಕೂಡಲೇ NAFED ಮತ್ತು NCCF ಮೂಲಕ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಅನುಮತಿ ನೀಡಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ. ಈ ಕುರಿತು ನವೆಂಬರ್ 6ರಂದೇ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದ್ದರೂ ಕೇಂದ್ರದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರೈತರು ಸರ್ಕಾರದ ಮೇಲಿಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಲು ಮತ್ತು ಅವರನ್ನು ಸಾಲದ ಸುಳಿಯಿಂದ ಪಾರು ಮಾಡಲು ಕೇಂದ್ರ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕು. ವಿಳಂಬ ಮಾಡಿದರೆ ಅದು ರೈತರ ಆಕ್ರೋಶಕ್ಕೆ ಕಾರಣವಾಗುವುದಲ್ಲದೆ, ಎಂಎಸ್‌ಪಿ ನೀತಿಯ ಮೇಲಿನ ವಿಶ್ವಾಸವನ್ನೇ ಕಳೆದುಕೊಳ್ಳುವಂತೆ ಮಾಡುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ತೊಗರಿ ಬೆಳೆಗಾರರ ಹಿತರಕ್ಷಣೆಗಾಗಿ ಕೇಂದ್ರ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Tags:    

Similar News