Old Pension Scheme | ಒಪಿಎಸ್ ಮರುಸ್ಥಾಪನೆಗೆ ಚಿಂತನೆ; ವರದಿ ಬಳಿಕ ಕ್ರಮ ಎಂದ ಸಿಎಂ
ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗದ ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮವಾಗಿ ಸ್ಪಂದಿಸಿದ್ದು, ಒಪಿಎಸ್ ಕುರಿತಾಗಿ ನೇಮಿಸಿರುವ ಸಮಿತಿಯಿಂದ ವರದಿ ಪಡೆದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.;
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಳೆ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರು ಜಾರಿ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರವನ್ನು ಒತ್ತಾಯಿಸಿದೆ.
ರಾಜ್ಯ ಸರ್ಕಾರಿ ನೌಕರರ ಸಂಘದ ನಿಯೋಗ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದೆ. ನೌಕರರ ಸಂಘದ ನೂತನ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ನೇತೃತ್ವದ ನಿಯೋಗದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಕಾರಾತ್ಮವಾಗಿ ಸ್ಪಂದಿಸಿದ್ದು, ಒಪಿಎಸ್ ಕುರಿತಾಗಿ ನೇಮಿಸಿರುವ ಸಮಿತಿಯಿಂದ ವರದಿ ಪಡೆದು, ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಅಲ್ಲದೇ ಸರ್ಕಾರಿ ನೌಕರರು ಹಾಗೂ ಕುಟುಂಬದ ಅವಲಂಬಿತರಿಗೆ ನಗದು ರಹಿತ ಆರೋಗ್ಯ ಸೇವೆ ಒದಗಿಸುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಬಗ್ಗೆಯೂ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ.
ಮುಖ್ಯ ಕಾರ್ಯದರ್ಶಿ ಭೇಟಿ ಮಾಡಿದ ನಿಯೋಗ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ನಿಯೋಗವು ಇದೇ ವೇಳೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನೂ ಭೇಟಿಯಾಗಿ ಅಭಿನಂದನೆ ಸಲ್ಲಿಸಿತು. ಬಳಿಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಕ್ಕೆ ಮನವಿ ಮಾಡಿತು.
ಇದಕ್ಕೆ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು, ಜ.15 ರಂದು ಆರ್ಥಿಕ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ, ಯೋಜನೆ ಬಗ್ಗೆ ಸಮಾಲೋಚನೆ ನಡೆಸಿ ಅನುಷ್ಠಾನ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕೆಎಸ್ಆರ್‌ಸಿಟಿಯು ತನ್ನ ನೌಕರರಿಗೆ ಎಸ್‌ಬಿಐ ಬ್ಯಾಂಕ್ ಮೂಲಕ ಕಲ್ಪಿಸಿರುವ ವಿಶಿಷ್ಟ ಸೌಲಭ್ಯದ ಮಾದರಿಯಲ್ಲೇ ವಿಮಾ ಸೌಲಭ್ಯ ಕಲ್ಪಿಸಿಕೊಡುವ ಸಂಬಂಧ ಮಾತುಕತೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಎಸ್‌ಬಿಐ ಬ್ಯಾಂಕ್‌ನಲ್ಲಿ ಸರ್ಕಾರಿ ಅಧಿಕಾರಿಗಳು, ನಿಗಮ-ಮಂಡಳಿ ಹಾಗೂ ಸ್ವಾಯತ್ತ ಸಂಸ್ಥೆಯ ಸಿಬ್ಬಂದಿ ಹೊಂದಿರುವ ಖಾತೆಯನ್ನು 'ಸಮಗ್ರ ಸಂಬಳ ಪ್ಯಾಕೇಜ್ ಖಾತೆ' ಯಾಗಿ (Comprehensive Salary Package Account) ಪರಿವರ್ತಿಸಿ, ರೂ. 1 ಕೋಟಿ ಅಪಘಾತ ವಿಮಾ ಪರಿಹಾರ ಸೌಲಭ್ಯ ಕಲ್ಪಿಸಲಾಗಿದೆ. ಅದೇ ಮಾದರಿಯನ್ನು ರಾಜ್ಯ ಸರ್ಕಾರಿ ನೌಕರರಿಗೂ ಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಏನಿದು ಹಳೆ ಪಿಂಚಣಿ ಯೋಜನೆ?
2004 ಜ.1 ರ ಪೂರ್ವದಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಯಲ್ಲಿತ್ತು. ಈ ಯೋಜನೆಯಡಿ ಸರ್ಕಾರಿ ನೌಕರರು ನಿವೃತ್ತಿ ಬಳಿಕ ವೇತನದ ಅರ್ಧದಷ್ಟು ನಿವೃತ್ತಿ ವೇತನ, ತುಟ್ಟಿಭತ್ಯೆ ಸೇರಿ ಹಲವು ಅನುಕೂಲಗಳನ್ನು ಪಡೆಯುತ್ತಿದ್ದರು. ಕೇಂದ್ರ ಸರ್ಕಾರ 2004 ರಲ್ಲಿ ಪಿಂಚಣಿ ಯೋಜನೆಗೆ ಸುಧಾರಣೆ ತಂದು ಹಳೆಯ ಪಿಂಚಣಿ ಯೋಜನೆ ರದ್ದುಪಡಿಸಿತ್ತು. ಹಳೆ ಪಿಂಚಣಿ ಯೋಜನೆಯಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರಿ ನೌಕರರು ನಿವೃತ್ತಿಯ ಸಮಯದಿಂದ ಮರಣದವರೆಗೆ ಜೀವಿತಾವಧಿಯ ಆದಾಯ ಭದ್ರತೆಯಾಗಿ ಸರ್ಕಾರದಿಂದ ಪಿಂಚಣಿ ಪಡೆಯುತ್ತಿದ್ದರು. 2014 ರ ನಂತರ ಸೇವೆಗೆ ಸೇರಿದ ಎಲ್ಲರೂ ಎನ್‌ಪಿಎಸ್ ವ್ಯಾಪ್ತಿಗೆ ಒಳಪಟ್ಟಿದ್ದರು.
ರಾಷ್ಟ್ರೀಯ ಪಿಂಚಣಿ ಯೋಜನೆ ಏನು?
ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್‌ಪಿಎಸ್)ಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಸುಮಾರು 2.78 ಲಕ್ಷ ಉದ್ಯೋಗಿಗಳು ಇದ್ದಾರೆ. ಆದರೆ, ಸರ್ಕಾರಿ-ಅನುದಾನಿತ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ವಿರೋಧಿಸಿದ್ದು, ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಒತ್ತಾಯಿಸುತ್ತಿದ್ದಾರೆ.
ಈಗಾಗಲೇ ರಾಜಸ್ಥಾನ, ಪಂಜಾಬ್, ಛತ್ತೀಸಗಢ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಎನ್‌ಪಿಎಸ್‌ನಿಂದ ನಿರ್ಗಮಿಸಿ ಒಪಿಎಸ್‌ಗೆ ಮರಳಿವೆ. 2023 ರ ವಿಧಾನಸಭೆ ಚುನಾವಣೆ ಅವಧಿಯಲ್ಲಿ ಒಪಿಎಸ್ ಮರ ಜಾರಿಗೊಳಿಸುವ ಕುರಿತು ಕಾಂಗ್ರೆಸ್ ಭರವಸೆ ನೀಡಿತ್ತು. ಇದರ ಪರಿಶೀಲನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ನೇತೃತ್ವದಲ್ಲಿ ಸಮಿತಿಯನ್ನೂ ರಚಿಸಲಾಗಿದೆ.
ಏಕೀಕೃತ ಪಿಂಚಣಿ ಯೋಜನೆ ಏನು?
ಕೇಂದ್ರ ಸರ್ಕಾರ ರಾಷ್ಟ್ರೀಯ ಪಿಂಚಣಿ ಯೋಜನೆ ಪರಿಷ್ಕರಿಸಿ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅನುಷ್ಠಾನಗೊಳಿಸಿದೆ. ಇದು 2025 ಏ.1 ರಿಂದ ಜಾರಿಗೆ ಬರಲಿದೆ. ಈ ಯೋಜನೆಯಡಿ ನಿವೃತ್ತಿಯ ನಂತರ ಕನಿಷ್ಠ ಪಿಂಚಣಿ ಸಿಗಲಿದೆ. ಆದರೆ, ಕೇಂದ್ರ ಸರ್ಕಾರದ ಯುಪಿಎಸ್ ಯೋಜನೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಸರ್ಕಾರಿ ನೌಕರರು ವಿರೋಧ ವ್ಯಕ್ತಪಡಿಸಿದ್ದು, ಪರಿಶೀಲನೆಗಾಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದೆ.