Fine For Traffic Violation | ಇ-ಚಲನ್‌ನಲ್ಲಿ ದಾಖಲಾದ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ

ಈ ಹಿಂದೆ 2023 ಫೆ.11ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಸರ್ಕಾರವು ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿತ್ತು.;

Update: 2025-08-22 03:45 GMT

ಸಾಂದರ್ಭಿಕ‌ ಚಿತ್ರ

ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಂಡದ ಮೊತ್ತದಲ್ಲಿ ಸಿಗುವ ರಿಯಾಯಿತಿಯು 2025ನೇ ಆ. 23 ರಿಂದ ಸೆ .12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅವರು 2025 ಜೂ.26 ಮತ್ತು ಆ.12 ರಂದು ಬರೆದಿದ್ದ ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸೂಚಿಸಿದ್ದರು.

ಅದಕ್ಕಾಗಿ 2025 ಜು.5 ರಿಂದ 11 ರವರೆಗೆ ಕಾಲಾವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆಯೂ ಕೋರಿದ್ದರು. ಆದರೆ, ಈ ಅವಧಿಯಲ್ಲಿ ಸಾಧ್ಯವಾಗದ ಕಾರಣ ಆ.23 ರಿಂದ ಸೆ.12ರವರೆಗೆ  ಕಾಲಾವಕಾಶ ನಿಡಲಾಗಿದೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು 2025 ಮಾ.4ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50 ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿದ್ದರು.

ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಈ ಹಿಂದೆ 2023 ಫೆ.11ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಸರ್ಕಾರವು ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ. 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿತ್ತು.

Tags:    

Similar News