ಪೆನ್‌ ಡ್ರೈವ್‌ ಹಗರಣ‌ | ಕೆಲವೇ ಕ್ಷಣದಲ್ಲಿ ಎಸ್‌ಐಟಿ ತನಿಖೆ ಆರಂಭ: ಜಿ ಪರಮೇಶ್ವರ್

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳಿಗೆ ಸಂಬಂಧಿಸಿದಂತೆ ವಿಶೇಷಾ ತನಿಖಾ ತಂಡ ರಚಿಸಿ ತನಿಖೆ ನಡೆಸುವುದಾಗಿ ರಾಜ್ಯ ಸರ್ಕಾರ ಹೇಳಿದೆ.

Update: 2024-04-28 05:59 GMT

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದೆನ್ನಲಾದ ಲೈಂಗಿಕ ಹಗರಣದ ವಿಡಿಯೋಗಳ ಕುರಿತು ತನಿಖೆ ನಡೆಸಲು ವಿಶೇಷಾ ತನಿಖಾ ತಂಡ ರಚಿಸಿ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ. 

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹಸಚಿವ ಜಿ ಪರಮೇಶ್ವರ್‌, "ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋಗಳ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆಯಾಗಿದ್ದು, ಇಂದೇ (ಭಾನುವಾರ) ತನಿಖಾ ತಂಡ ತನಿಖೆ ಆರಂಭಿಸಲಿದೆ" ಎಂದು ಹೇಳಿದ್ದಾರೆ. 

ಪ್ರಕರಣದ ಬಗ್ಗೆ ಮಹಿಳಾ ಆಯೋಗದಿಂದ ಬಂದಿರುವ ಪತ್ರದ ಹಿನ್ನೆಲೆಯಲ್ಲಿ ತನಿಖೆಗೆ ಸೂಚಿಸಿದ್ದೇವೆ. ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತೇವೆ. ಪ್ರಜ್ವಲ್‌ ರೇವಣ್ಣ ಅವರು ವಿದೇಶಕ್ಕೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಂತ್ರಸ್ತ ಮಹಿಳೆಯರನ್ನು ಮಹಿಳಾ ಆಯೋಗ ಸಂಪರ್ಕಿಸುತ್ತಿದೆ. ಎಸ್‌ಐಟಿ ರಚನೆಯಾದ ಮೇಲೆ ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ಕೊಟ್ಟು ತನಿಖೆ ಮಾಡುತ್ತೇವೆ ಎಂದು ಗೃಹಸಚಿವರು ಹೇಳಿದ್ದಾರೆ. 

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಸಾವಿರಾರು ಅಶ್ಲೀಲ ವಿಡಿಯೋಗಳು ಕಳೆದ ಕೆಲವು ದಿನಗಳ ಕಾಲ ಹರಿದಾಡುತ್ತಿದೆ. ನೂರಾರು ಮಹಿಳೆಯರು ಈ ಹಗರಣದಲ್ಲಿ ಸಂತ್ರಸ್ತರಾಗಿದ್ದಾರೆ ಎಂಬ ಆರೋಪವೂ ಕೇಳಿ ಬಂದಿದೆ. ಹೀಗಿರುವಾಗ ಆರೋಪಿ ವಿದೇಶಕ್ಕೆ ಪಲಾಯನ ಮಾಡುವವರೆಗೆ ಸರ್ಕಾರ ಈ ಬಗ್ಗೆ ಗಂಭೀರವಾಗಿ ಕ್ರಮ ತೆಗೆದುಕೊಳ್ಳದೆ, ಆರೋಪಿಯನ್ನು ರಕ್ಷಿಸಲು ಪ್ರಯತ್ನಿಸಿದೆಯೇ ಎಂಬ ಪ್ರಶ್ನೆಯೂ ಈಗ ಎದ್ದಿದೆ.

Tags:    

Similar News