ಮಹದಾಯಿ ಯೋಜನೆಗೆ ಅನುಮತಿ ತಿರಸ್ಕಾರ; ಕನ್ನಡಿಗರಿಗೆ ದ್ರೋಹ ಬಗೆದ ಕೇಂದ್ರ ಸರ್ಕಾರ -ಸಿಎಂ ಆಕ್ರೋಶ

ಕೇಂದ್ರದ ಹೇಳಿಕೆ ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದ್ದು, ಇದನ್ನು ಸರ್ಕಾರ ಅತ್ಯುಗ್ರವಾಗಿ ಖಂಡಿಸಲಿದೆ. ಅಲ್ಲದೇ ಅನ್ಯಾಯದ ವಿರುದ್ದ ಕನ್ನಡಿಗರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸರ್ಕಾರ ಹೇಳಿದೆ.;

Update: 2025-07-23 16:10 GMT

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿರುವುದಕ್ಕೆ ರಾಜ್ಯ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೇಂದ್ರದ ಹೇಳಿಕೆ ರಾಜ್ಯದ ಜನತೆಗೆ ಬಗೆದ ದ್ರೋಹವಾಗಿದ್ದು, ಇದನ್ನು ಸರ್ಕಾರ ಅತ್ಯುಗ್ರವಾಗಿ ಖಂಡಿಸಲಿದೆ. ಅಲ್ಲದೇ ಅನ್ಯಾಯದ ವಿರುದ್ದ  ಕನ್ನಡಿಗರೊಂದಿಗೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಸರ್ಕಾರ ಹೇಳಿದೆ.

ಅನುಮತಿ ನೀಡುವುದಿಲ್ಲ ಎಂದವರು ಯಾರು?

ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಪರಿಸರ ಮತ್ತು ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್‍ ಅವರೇ ಖುದ್ದು ತಿಳಿಸಿರುವುದಾಗಿ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರು ಇಂದು  ಗೋವಾ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರವು ಕರ್ನಾಟಕದ ಹಿತಾಸಕ್ತಿ ಮೇಲಿನ ಮತ್ತೊಂದು ಪ್ರಹಾರವಾಗಿದೆ. 2018ರಲ್ಲಿ ಮಹದಾಯಿ ಜಲವಿವಾದ ನ್ಯಾಯಮಂಡಳಿ 13.42 ಟಿಎಂಸಿ ನೀರನ್ನು ನಮ್ಮ ರಾಜ್ಯಕ್ಕೆ ನಿಗದಿಪಡಿಸಿ ಐತೀರ್ಪು ನೀಡಿದ್ದರೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಅನುಸರಿಸಿದ ಪರಿಣಾಮ ಯೋಜನೆಯ ಅನುಷ್ಠಾನ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ಕಿಡಿಕಾರಿದ್ದಾರೆ.

ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಗದಗ, ಬಾಗಲಕೋಟೆ ಪ್ರದೇಶದ ಜನತೆಯ ಕುಡಿಯುವ ನೀರಿಗಾಗಿ 40 ಟಿಎಂಸಿ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ಯೋಜನೆ ಈಗಾಗಲೇ ಅನುಷ್ಠಾನಕ್ಕೆ ಸಿದ್ದಗೊಂಡಿದ್ದು, ಗೋವಾದ ಬಿಜೆಪಿ ಸರ್ಕಾರದ ಜೊತೆ ಶಾಮೀಲಾಗಿ ಕೇಂದ್ರ ಸರ್ಕಾರ ನಿರಂತರ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದ ಬಿಜೆಪಿ‌ ಸಂಸದರ ವಿರುದ್ಧ ಸಿಎಂ ಕಿಡಿ

ರಾಜ್ಯದ ಬಿಜೆಪಿ ನಾಯಕರಾಗಲಿ, ಕನ್ನಡಿಗರಿಂದಲೇ ಆರಿಸಿ ಹೋಗಿರುವ ಬಿಜೆಪಿ ಮತ್ತು ಜೆಡಿಎಸ್ ಸಂಸದರಾಗಲಿ ಈ ಅನ್ಯಾಯದ ವಿರುದ್ದ ದನಿ ಎತ್ತಲಾಗದಷ್ಟು ನಿರ್ವಿರ್ಯರಾಗಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ತಿರಸ್ಕರಿಸಿದ ಕರ್ನಾಟಕದ ಜನತೆಯ ವಿರುದ್ಧ ಸೇಡು ತೀರಿಸಿಕೊಳ್ಳುವ ದುರುದ್ದೇಶದಿಂದಲೇ ಮಹದಾಯಿ ಯೋಜನೆಗೆ ಪರಿಸರ ಸಚಿವಾಲಯದ ಅನುಮತಿಯನ್ನು ನಿರಾಕರಿಸಿರುವುದು ಸ್ಪಷ್ಟವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದ್ದಾರೆ.

ತೆರಿಗೆ ಹಂಚಿಕೆ, ಕೇಂದ್ರ ಪ್ರಾಯೋಜಿತ ಯೋಜನೆಗಳಲ್ಲಿ ಅನುದಾನ ಕಡಿತವೂ ಸೇರಿದಂತೆ ನೆಲ-ಜಲ-ಭಾಷೆಯ ವಿಚಾರದಲ್ಲಿ ಕೇಂದ್ರ ಸರ್ಕಾರ ಕರ್ನಾಟಕದ ವಿಚಾರದಲ್ಲಿ ನಿರಂತರವಾಗಿ ಅನ್ಯಾಯ ಎಸಗುತ್ತಿದೆ. ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆ ವಿರುದ್ಧ ನಾಡಿನ ಸಮಸ್ತ ಕನ್ನಡಿಗರನ್ನು ಜೊತೆಯಲ್ಲಿ ಕಟ್ಟಿಕೊಂಡು ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದ್ದಾರೆ.

Tags:    

Similar News