ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ: ಮೂವರಿಗೆ ಮರಣದಂಡನೆ
2021 ನವೆಂಬರ್ 21 ರಂದು ತನ್ನ ಸಹೋದರನೊಂದಿಗೆ ಆಟವಾಡುತ್ತಿದ್ದ ಬಾಲಕಿಗೆ ಸಿಹಿತಿಂಡಿ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರ ಎಸಗಿದ್ದರು. ಬಳಿಕ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದರು.
ಜಾರ್ಖಂಡ್ ರಾಜ್ಯದ ಎಂಟು ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಮೂವರು ವಲಸೆ ಕಾರ್ಮಿಕರಿಗೆ ಮಂಗಳೂರಿನ ಪೋಕ್ಸೊ ನ್ಯಾಯಾಲಯ ಮರಣದಂಡನೆ ವಿಧಿಸಿದೆ.
2021 ನವೆಂಬರ್ 21ರಂದು ಮಂಗಳೂರಿನ ತಿರುವೈಲು ಗ್ರಾಮದ ಹೆಂಚಿನ ಕಾರ್ಖಾನೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಲ್ಲಿಯೇ ಕೆಲಸ ಮಾಡುತ್ತಿದ್ದ ಮಧ್ಯಪ್ರದೇಶ ಮೂಲದ ಜೈಬನ್ ಆದಿವಾಸಿ (21), ಮುಖೇಶ್ ಸಿಂಗ್ (20), ಜಾರ್ಖಂಡ್ ಮೂಲದ ಮನೀಶ್ ಟಿರ್ಕಿ(33) ಹಾಗೂ ಮಧ್ಯಪ್ರದೇಶದ ಮುನೀಮ್ ಸಿಂಗ್ ಎಂಬುವರು ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದರು.
ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪೈಕಿ ನಾಲ್ಕನೇ ಆರೋಪಿ ಮುನೀಮ್ ಸಿಂಗ್ ತಲೆಮರೆಸಿಕೊಂಡಿದ್ದಾನೆ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶ ಮನು ಕೆ.ಎಸ್ ಅವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿದ್ದಾರೆ.
ಈ ಕುರಿತು ಮಾಧ್ಯಮದಗಳಿಗೆ ವಿವರಿಸಿದ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಬದ್ರಿನಾಥ್ ನಾಯರಿ, ಆರೋಪಿಗಳು 2021 ನವೆಂಬರ್ 21 ರಂದು ತನ್ನ ಸಹೋದರನೊಂದಿಗೆ ಆಟವಾಡುತ್ತಿದ್ದ ಬಾಲಕಿಗೆ ಸಿಹಿತಿಂಡಿ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಅಸ್ವಾಭಾವಿಕ ಲೈಂಗಿಕ ಕಿರುಕುಳ ನೀಡಿದ ಬಳಿಕ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿದ್ದರು. ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 120 (ಬಿ), 366 (ಎ), 376 ಡಿಬಿ, 377, 302 ಮತ್ತು ಪೋಕ್ಸೋ ಕಾಯ್ದೆಯ ಸೆಕ್ಷನ್ 6 ರಡಿ ಪ್ರಕರಣ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಪ್ರಕರಣದಲ್ಲಿ ಸುಮಾರು 30 ಸಾಕ್ಷಿಗಳ ವಿಚಾರಣೆ ನಡೆಸಿದ ಫಾಸ್ಟ್ ಟ್ರ್ಯಾಕ್ ವಿಶೇಷ ನ್ಯಾಯಾಲಯ-2 ರ ನ್ಯಾಯಾಧೀಶ ಮನು ಕೆ.ಎಸ್ ಅವರು ಅಪರಾಧಿಗಳಿಗೆ ಮರಣದಂಡನೆ ವಿಧಿಸಿ, 1.20 ಲಕ್ಷ ರೂ.ದಂಡ ಹಾಕಿದ್ದಾರೆ. ದಂಡದ ಹಣವನ್ನು ಸಂತ್ರಸ್ತೆಯ ಪೋಷಕರಿಗೆ ನೀಡುವಂತೆ ಆದೇಶಿಸಿದ್ದಾರೆ. ಜೊತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 3.80 ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.