ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ | ಸರ್ಕಾರದಿಂದ ವಿಶೇಷ ಪ್ರಾಸಿಕ್ಯೂಟರ್ ನೇಮಕ

Update: 2024-05-01 06:17 GMT

ದೇಶಾದ್ಯಂತ ಸದ್ದು ಮಾಡುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು (ವಿಶೇಷ ಪ್ರಾಸಿಕ್ಯೂಟರ್) ನೇಮಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣಗಳು ಹೊಳೆನರಸೀಪುರದಲ್ಲಿ ದಾಖಲಾಗಿದ್ದು, ಈ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ(ಎಸ್ಪಿಪಿ) ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ (ಏ.30) ಆದೇಶ ಹೊರಡಿಸಿದೆ.

ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ. ಇದೀಗ ಇವರನ್ನೇ ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ರೇವಣ್ಣ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ನೇಮಕ ಮಾಡಲಾಗಿದೆ.

ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಅವರ ತಂದೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ 354 A, 354 D, 509 ಅಡಿ ಪ್ರಕರಣ ದಾಖಲಾಗಿದ್ದು, ಎಫ್ಐಆರ್‌ನಲ್ಲಿ ಹೆಚ್.ಡಿ.ರೇವಣ್ಣ ಆರೋಪಿ ನಂಬರ್ 1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.

ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆ ನಡೆಸಲು ಎಸ್ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ. ಕೆಲ ಸಂತ್ರಸ್ತೆಯರನ್ನು ಪತ್ತೆ ಮಾಡಿ ಕೆಲ ಮಹತ್ವದ ದಾಖಲೆಯನ್ನು ಕಲೆಹಾಕಿದ್ದಾರೆ.

Tags:    

Similar News