Prajwal Pendrive Case | ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ
ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ.
ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಹಗರಣದ ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಪ್ರಜ್ವಲ್ ಸಹೋದರ ಸೂರಜ್ ರೇವಣ್ಣಅವರು ಮಂಗಳವಾರ (ಜು.23) ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದ. ಹೀಗಾಗಿ ಕುಟುಂಬಸ್ಥರು ಇಂದು ಪ್ರಜ್ವಲ್ಗೂ ಜಾಮೀನು ಸಿಗಲಿದೆ ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಕೋರ್ಟ್, ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಮಹಿಳೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕಳೆದ ಒಂದೂವರೆ ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ಇನ್ನು ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜೂ.26ರಂದು 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ವಜಾಗೊಳಿಸಿದ್ದರು. ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು.