ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ʼಗ್ಯಾರಂಟಿʼಯಿಲ್ಲ 2ಎ ಮೀಸಲಾತಿ; ಸಿದ್ದರಾಮಯ್ಯ ಸುಳಿವು

ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ ಪ್ರಮಾಣಪತ್ರ ಆಧಾರದ ಮೇಲೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Update: 2024-12-09 12:04 GMT

2ಎ ಮೀಸಲಾತಿಗಾಗಿ ಅಧಿವೇಶನ ಸಂದರ್ಭದಲ್ಲೇ ಪ್ರತಿಭಟನೆಗೆ ಸಿದ್ಧವಾಗಿರುವ ಪಂಚಮಸಾಲಿ ಸಮುದಾಯಕ್ಕೆ ಸರ್ಕಾರ ದೊಡ್ಡ ಶಾಕ್ ನೀಡಿದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕಾದರೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಬೇಕು. ಆಯೋಗ ಸಲ್ಲಿಸುವ ವರದಿ ಆಧಾರದ ಮೇಲೆ ಮೀಸಲಾತಿ ಬೇಡಿಕೆ ಪರಿಶೀಲಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಈಗ ಹಿಂದಿನ ಬಿಜೆಪಿ ಸರ್ಕಾರ ಸುಪ್ರೀಂಕೋರ್ಟ್ ಸಲ್ಲಿಸಿರುವ ಪ್ರಮಾಣಪತ್ರ, ನ್ಯಾಯಾಲಯದ ಆದೇಶವನ್ನು ಸದನದಲ್ಲಿ ಮಂಡಿಸಲಾಗುವುದು ಎಂದು  ಸೋಮವಾರ ಬೆಳಗಾವಿಯಲ್ಲಿ ಆರಂಭವಾದ ವಿಧಾನಸಭೆ ಅಧಿವೇಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದರಿಂದ ಪಂಚಮಸಾಲಿಗಳಿಗೆ ಸದ್ಯಕ್ಕಂತೂ ಮೀಸಲಾತಿ ಸಿಗುವ ಲಕ್ಷಣಗಳು ಕ್ಷೀಣಿಸಿದಂತಾಗಿದೆ.

 2ಎ ಮೀಸಲಾತಿ ಕುರಿತು ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವುದಾಗಿ ಸುಪ್ರೀಂಕೋರ್ಟ್‌ಗೆ ಅಫಿದವಿತ್‌ ಸಲ್ಲಿಸಿದೆ. ಇದರ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ. ಅದನ್ನು ಸದನ ಮುಂದೆ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವ ಕುರಿತಂತೆ ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಯುತ್ತಿದೆ. ನಾನು ಮುಖ್ಯಮಂತ್ರಿ ಆದ ಬಳಿಕ ಜಯಮೃತ್ಯುಂಜಯ ಸ್ವಾಮೀಜಿ ಸೇರಿ ಹಲವು ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಲು ನಾನು ಅಡ್ಡಿಯಾಗಿಲ್ಲ. ಆದರೆ, ಈ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ಆದೇಶ ಪಾಲಿಸುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಿಸಲಾಗಿದೆ. ವೀರಶೈವ ಲಿಂಗಾಯತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಆದರೆ, ಪಂಚಮಸಾಲಿಗಳನ್ನು 2ಎ ಗೆ ಸೇರಿಸಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಅವಶ್ಯಕವಾಗಿದೆ.

ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಾಟಗಾರರಿಗೆ ತಿಳಿಸಿದ್ದೇನೆ. ಹಿಂದಿನ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿಗಳನ್ನು 2ಎ ಸೇರಿಸಿರಲಿಲ್ಲ. ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಮರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿ ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ 2 ರಂತೆ ಹಂಚಿಕೆ ಮಾಡಿದ್ದರು. ಇದನ್ನು ಆಕ್ಷೇಪಿಸಿ ಮುಸ್ಲಿಮರು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ವೇಳೆ ಇದೇ ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿ ರದ್ದುಪಡಿಸುವುದಿಲ್ಲ. ಯಥಾಸ್ಥಿತಿ ಕಾಯ್ದುಕೊಳ್ಳುತ್ತೇವೆ ಎಂದು ಪ್ರಮಾಣಪತ್ರ ಸಲ್ಲಿಸಿದೆ. ಇದರ ಆಧಾರದ ಮೇಲೆ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸುಪ್ರೀಂಕೋರ್ಟ್ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸಬೇಕು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಕೋರಿದ್ದರು.

ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ  2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ. ಬೆಳಗಾವಿ ವಿಧಾನಸಭೆ ಅಧಿವೇಶನ ವೇಳೆ ಸಾವಿರಾರು ಮಂದಿ ಸೇರಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುವುದಾಗಿ ಸ್ವಾಮೀಜಿ ಹೇಳಿಕೆ ನೀಡಿದ್ದರು.  ಮಂಗಳವಾರ ಬೆಳಗಾವಿ ಸುವರ್ಣಸೌಧಕ್ಕೆ ಸಾವಿರಾರು ಟ್ರಾಕ್ಟರ್‌ಗಳ ಮೂಲಕ ಬಂದು ಮುತ್ತಿಗೆ ಹಾಕುವುದಾಗಿಯೂ ಘೋಷಿಸಿದ್ದರು.

ಆದರೆ ಭದ್ರತಾ ಕಾರಣಗಳಿಂದಾಗಿ ಧರಣಿ ಸತ್ಯಾಗ್ರಹ ಮಾತ್ರ ನಡೆಸಲು ಪಂಚಮಸಾಲಿ ಸ್ವಾಮೀಜಿ ನೇತೃತ್ವದಲ್ಲಿ ಮುಂದಾಗಿದ್ದಾರೆ. 

Tags:    

Similar News