ಜಾತಿಗಣತಿ ಮುಂದೂಡಲು ಒತ್ತಡ; ಸಮಾಜದ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸಲ್ಲ- ಡಿಕೆಶಿ

ಕಾವೇರಿ ನೀರಿನ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರೊಂದಿಗೆ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕಾಗಿ ದೆಹಲಿಗೆ ಹೋಗುತ್ತಿದ್ದೇನೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

Update: 2025-09-21 08:15 GMT

ಡಿಸಿಎಂ ಡಿ.ಕೆ. ಶಿವಕುಮಾರ್‌

ಜಾತಿ ಸಮೀಕ್ಷೆ ಕುರಿತ ಗೊಂದಲಗಳು ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿವೆ. ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಮುಂದೂಡಬೇಕೆಂದು ಶನಿವಾರ ಒಕ್ಕಲಿಗ ಸಮಾಜದ ಸಭೆಯಲ್ಲಿ ಕೈಗೊಂಡಿದ್ದ ನಿರ್ಣಯ ಕುರಿತಂತೆ ಪ್ರತಿಕ್ರಿಯಿಸಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರಾಕರಿಸಿದರು.

ಭಾನುವಾರ ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಸರ್ಕಾರದ ಭಾಗವಾಗಿದ್ದೇನೆ. ಸಮಾಜದವರ ಅಭಿಪ್ರಾಯದ ಬಗ್ಗೆ ಮಾತನಾಡುವುದಿಲ್ಲ. ಜಾತಿಗಣತಿ ಮುಂದೂಡಬೇಕೆಂಬುದು ಅವರ ಅಭಿಪ್ರಾಯ. ಮುಂದೆ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

ದೆಹಲಿಗೆ ತೆರಳುತ್ತಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರೊಂದಿಗೆ ಚರ್ಚಿಸಲು ಹಾಗೂ ಒಂದಷ್ಟು ಕೆಲಸಗಳ ಕಾರಣಕ್ಕಾಗಿ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿದರು.

ಒಕ್ಕಲಿಗ ಮುಖಂಡರ ನಿರ್ಣಯ ಏನು?

ಶನಿವಾರ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗ ಮಠಾಧೀಶರು ಹಾಗೂ ಮುಖಂಡರ ಸಭೆಯಲ್ಲಿ ಜಾತಿವಾರು ಸಮೀಕ್ಷೆ ವರದಿಯನ್ನು ಮುಂದೂಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವ ನಿರ್ಣಯ ಕೈಗೊಳ್ಳಲಾಗಿತ್ತು. ಸಭೆಯಲ್ಲಿ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿ, ಸಮಾಜದ ಅಭಿಪ್ರಾಯ, ಜಾತಿಗಣತಿಯಲ್ಲಿನ ಸಮಸ್ಯೆಗಳನ್ನು ಬಗೆಹರಸುವ ಜವಾಬ್ದಾರಿಯನ್ನು ಡಿ.ಕೆ. ಶಿವಕುಮಾರ್‌ ಅವರಿಗೆ ವಹಿಸಲಾಗಿದೆ ಎಂದು ಹೇಳಿದ್ದರು.

ಜಾತಿ ವಿಚಾರದಲ್ಲಿ ಒಕ್ಕಲಿಗರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಬೆಂಗಳೂರಿನಲ್ಲಿ ಹೆಚ್ಚು ಭೂಮಿಯನ್ನು ಕಳೆದುಕೊಂಡವರು ಒಕ್ಕಲಿಗರು. ಈ ಎಲ್ಲಾ ಸಮಸ್ಯೆ ಬಗೆಹರಿಸಲು ಡಿ.ಕೆ. ಶಿವಕುಮಾರ್ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಮುಂದೇನು ಆಗಲಿದೆಯೋ ನೋಡೋಣ. ಈ ಹಿಂದಿನ ʼಕಾಂತರಾಜ್ ವರದಿಗಿಂತಲೂ ಈಗಿನ ವರದಿ ಕೆಟ್ಟದಾಗಿರಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

Tags:    

Similar News