ಸಿಎಂ ಸಿದ್ದರಾಮಯ್ಯ ಬಗ್ಗೆ ಅಶ್ಲೀಲ ಮಾತು: ಅರ್ಚಕನ ಬಂಧನ, ಹುದ್ದೆಯಿಂದ ಅಮಾನತು
ಸಮಾಜದಲ್ಲಿ ಶಾಂತಿ ಕದಡಲು ಯತ್ನ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಆರೋಪದಡಿ, ಗುರುರಾಜ್ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಆತನನ್ನು ಬಂಧಿಸಿದ್ದಾರೆ.;
ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಶ್ಲೀಲ ಮತ್ತು ಕೀಳು ಮಟ್ಟದ ಪದಗಳನ್ನು ಬಳಸಿ ನಿಂದಿಸಿದ್ದ ಅರ್ಚಕ ಗುರುರಾಜ್ ಎಂಬಾತನನ್ನು ಕೆಂಗೇರಿ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕೆಂಗೇರಿ ಉಪನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪಕ್ಕದಲ್ಲಿರುವ ಗಣಪತಿ ದೇವಸ್ಥಾನದ ಸಹಾಯಕ ಅರ್ಚಕರಾಗಿದ್ದ ಗುರುರಾಜ್, ಯುಟ್ಯೂಬ್ ಚಾನೆಲ್ ಒಂದಕ್ಕೆ ನೀಡಿದ ಸಂದರ್ಶನದಲ್ಲಿ, ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದನ್ನು ವಿರೋಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದವು.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸಮಾಜದಲ್ಲಿ ಶಾಂತಿ ಕದಡಲು ಯತ್ನ ಮತ್ತು ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಆರೋಪದಡಿ, ಗುರುರಾಜ್ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಆತನನ್ನು ಬಂಧಿಸಿದ್ದಾರೆ.
ಅರ್ಚಕ ಸ್ಥಾನದಿಂದ ಅಮಾನತು
ಗುರುರಾಜ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಶ್ರೀ ರಾಘವೇಂದ್ರ ಸ್ವಾಮಿ ಸೇವಾ ಸಮಿತಿ ಟ್ರಸ್ಟ್, ಅವರನ್ನು ತಕ್ಷಣದಿಂದಲೇ ಸಹಾಯಕ ಅರ್ಚಕ ಸ್ಥಾನದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.