WATER CRISIS | ಪಿಡಿಒಗಳೊಂದಿಗೆ ಸಭೆ ನಡೆಸಲು ಜಿಪಂ ಸಿಇಒಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ
ನೀರಿನ ಅಭಾವವನ್ನು ಸಮರ್ಪಕವಾಗಿ ಎದುರಿಸಲು ಪಿಡಿಒ ಗಳೊಂದಿಗೆ ಸಭೆ ನಡೆಸಲು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೂಚಿಸಿದ್ದಾರೆ;
ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದಲ್ಲಿ ಹೆಚ್ಚುತ್ತಿರುವ ಕುಡಿಯುವ ನೀರಿನ ಅಭಾವ ಕುರಿತು ಪಿಡಿಒ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನೀರಿನ ಪರಿಸ್ಥಿತಿ ಬಗ್ಗೆ ಅವಲೋಕಿಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಪ್ರಿಯಾಂಕ್ ಖರ್ಗೆ ಅವರು, “ಮುಂದಿನ ಮೂರು ತಿಂಗಳ ಕಾಲ ಪ್ರತಿ ಎರಡನೆ ಹಾಗೂ ನಾಲ್ಕನೆ ಸೋಮವಾರ ಸಭೆ ನಡೆಸಿ, ನೀರಿನ ಅಭಾವ ಎದುರಿಸುವ ಗ್ರಾಮಗಳಿಗೆ ಪರ್ಯಾಯ ನೀರಿನ ವ್ಯವಸ್ಥೆ ಮಾಡಬೇಕು” ಎಂದು ನಿರ್ದೇಶಿಸಿದ್ದಾರೆ.
ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ಎದುರಿಸಲು ಎಲ್ಲಾ ಜಿಲ್ಲಾ ಪಂಚಾಯತಿಗಳಲ್ಲಿ 24X7 ನಿಯಂತ್ರಣ ಕೊಠಡಿ ಆರಂಭಿಸಬೇಕು. ತಾಲ್ಲೂಕು ಮಟ್ಟದಲ್ಲಿ ಕಾರ್ಯಾನಿರ್ವಾಹಕ ಅಧಿಕಾರಿಗಳ ಮೂಲಕ ಕ್ಷಿಪ್ರ ಕಾರ್ಯಪಡೆ ರಚಿಸಿ ಬರ ಪರಿಸ್ಥಿತಿಯನ್ನು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು ಎಂದು ಅವರು ಸಭೆಯಲ್ಲಿ ತಿಳಿಸಿದ್ದಾರೆ.
ಗ್ರಾಮಗಳಲ್ಲಿನ ನೀರಿನ ಲಭ್ಯತೆ ಹಾಗೂ ಕೊರತೆಯ ಬಗ್ಗೆ ಮಾಹಿತಿ ಸಂಗ್ರಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದ್ದು, ಮುಂದಿನ ಮೂರು ತಿಂಗಳ ಕಾಲ ಪ್ರತಿ 15 ದಿನಗಳಿಗೊಮ್ಮೆ ಪತ್ರಿಕಾಗೋಷ್ಠಿ ಕರೆದು ನೀರಿನ ಅಭಾವ ಎದುರಿಸಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ.
ಅಲ್ಲದೆ, ಪ್ರತಿ ಸೋಮವಾರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಪ್ರವಾಸ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದೂ ನಿರ್ದೇಶಿಸಲಾಗಿದೆ.