ರಾಜ್ಯದಲ್ಲಿ 3,988 ಅಂಗನವಾಡಿ ತೆರೆಯಲು ಕೇಂದ್ರಕ್ಕೆ ಪ್ರಸ್ತಾವ: ಲಕ್ಷ್ಮಿ ಹೆಬ್ಬಾಳ್ಕರ್

ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕವಿರುತ್ತದೆ. ಹೀಗಾಗಿ ಕೇಂದ್ರಕ್ಕೆ ಮನವಿ ಮಾಡಿದ್ದು, ಕೇಂದ್ರ ಅನುಮತಿ ಕೊಟ್ಟ ಬಳಿಕ ಹೊಸ ಅಂಗನವಾಡಿ ಕೇಂದ್ರ ಪ್ರಾರಂಭ ಮಾಡುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.;

Update: 2024-12-14 05:30 GMT
ಲಕ್ಷ್ಮೀ ಹೆಬ್ಬಾಳ್ಕರ್‌
Click the Play button to listen to article

ರಾಜ್ಯದಲ್ಲಿ ಹೊಸದಾಗಿ 3988 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕೇಂದ್ರ ಸರ್ಕಾರದ ಅನುಮೋದನೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಅವರು ಶುಕ್ರವಾರ ನಡೆದ ಬೆಳಗಾವಿ ಅಧಿವೇಶನಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಶಾಸಕ ಜವರಾಯೇಗೌಡ ಪರವಾಗಿ ತಿಪ್ಪೇಸ್ವಾಮಿ ಪ್ರಶ್ನೆ ಕೇಳಿದ್ದು, ಇದಕ್ಕೆ ಉತ್ತರಿಸಿದ ಲಕ್ಷ್ಮಿ ಹೆಬ್ಬಾಳ್ಕರ್ ಹೊಸದಾಗಿ ಅಂಗನವಾಡಿ ಕೇಂದ್ರ ಪ್ರಾರಂಭಿಸಲು ಕೇಂದ್ರ ಸರ್ಕಾರದ ಅನುಮೋದನೆ ಅವಶ್ಯಕವಿರುತ್ತದೆ. ಹೀಗಾಗಿ ಕೇಂದ್ರಕ್ಕೆ ಮನವಿ ಮಾಡಿದ್ದು, ಕೇಂದ್ರ ಅನುಮತಿ ಕೊಟ್ಟ ಬಳಿಕ ಹೊಸ ಅಂಗನವಾಡಿ ಕೇಂದ್ರ ಪ್ರಾರಂಭ ಮಾಡುವುದಾಗಿ ತಿಳಿಸಿದ್ದಾರೆ. 

ಅಂಗನವಾಡಿ ಕೇಂದ್ರದಲ್ಲಿ ಫಲಾನುಭವಿಗಳಿಗೆ ಪೂರೈಸಲಾಗುವ ಪೂರಕ ಪೌಷ್ಟಿಕ ಆಹಾರ ಯೋಜನೆಯಡಿ ಹಂಚಿಕೆ ಅನುದಾನದಲ್ಲಿ ಕೇಂದ್ರದ ಪಾಲು ಶೇ.20 ರಷ್ಟು ಇರುತ್ತದೆ. ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಗೌರವಧನ ಪಾವತಿಯಲ್ಲಿ ಆಡಳಿತ ವೆಚ್ಚದಡಿ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30 ರಷ್ಟಿರುತ್ತದೆ. ಸಬ್ಸಿಡಿ ದರದಲ್ಲಿ ಅಕ್ಕಿ ಮತ್ತು ಗೋಧಿಯನ್ನು ಸಹ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಹಂಚಿಕೆ ಮಾಡುತ್ತದೆ. ಹಾಲಿ ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಅನುಮೋದಿತ 65,931 ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯ ಸರ್ಕಾರದ ವತಿಯಿಂದ ಅನುದಾನಿತ 3,988 ಅಂಗನವಾಡಿ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಸದರಿ 3,988 ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರದ ಅನುಮೋದನೆಗಾಗಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದರು.

Tags:    

Similar News