ಪಿಎಸ್​ಐ ನೇಮಕಾತಿ ಆದೇಶ ಪತ್ರ ಶೀಘ್ರ ವಿತರಣೆ: ಗೃಹ ಸಚಿವ ಡಾ. ಜಿ. ಪರಮೇಶ್ವರ ಭರವಸೆ

ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಅವರ ಆಡಿಯೋ ವಿಚಾರದ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ ಎಂದು ಹೇಳಿದರು.;

Update: 2025-06-22 10:46 GMT

ಗೃಹ ಸಚಿವ ಡಾ. ಜಿ.ಪರಮೇಶ್ವರ್‌

ಪಿಎಸ್‌ಐ ನೇಮಕಾತಿ ಹಗರಣದಿಂದಾಗಿ ಕಳೆದ ಐದು ವರ್ಷಗಳಿಂದ ಪೊಲೀಸ್ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ಪಿಎಸ್‌ಐ ಮತ್ತು ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಆದೇಶ ಪತ್ರಗಳನ್ನು ವಿತರಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಭರವಸೆ ನೀಡಿದ್ದಾರೆ.

ನಗರದಲ್ಲಿ ಭಾನುವಾರ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬಡ ಜನರು ಈಗ ಮಧ್ಯಮ ವರ್ಗಕ್ಕೆ ಬಂದಿದ್ದಾರೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕಾಮಗಾರಿಗಳಿಗೂ ಸರ್ಕಾರ ಸಮರ್ಪಕವಾಗಿ ಅನುದಾನ ನೀಡುತ್ತಿದೆ ಎಂದು ಪರಮೇಶ್ವರ ಹೇಳಿದರು.

ಬಿ.ಆರ್. ಪಾಟೀಲ್ ಆಡಿಯೋ ವಿವಾದ ದೊಡ್ಡದಲ್ಲ 

ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಅವರ ಆಡಿಯೋ ವಿಚಾರದ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, "ಅವರು ಮಾಡಿರುವುದು ಗಂಭೀರ ಆರೋಪ ಅಲ್ಲ. ಸಂಬಂಧಿಸಿದ ಸಚಿವರ ಜೊತೆ ಮಾತನಾಡುವಂತೆ ಅವರಿಗೆ (ಬಿ.ಆರ್. ಪಾಟೀಲ್) ಹೇಳಿದ್ದೇನೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು," ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ, ಗಣಿ ಅಕ್ರಮದ ಕುರಿತು ಸಚಿವ ಎಚ್.ಕೆ. ಪಾಟೀಲ್ ಬರೆದ ಪತ್ರದ ಬಗ್ಗೆ ಮಾತನಾಡಿದ ಪರಮೇಶ್ವರ, "ಲೂಟಿ ಮಾಡಿದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಚಿವರು ಸಲಹೆ ನೀಡಿದ್ದಾರೆ. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು," ಎಂದು ತಿಳಿಸಿದರು.

Tags:    

Similar News