ಏ.29ರಿಂದ ಪಿಯುಸಿ-2ನೇ ಪರೀಕ್ಷೆ | ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಕೆಎಸ್‌ಆರ್‌ಟಿಸಿ ಅವಕಾಶ

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಏ.29 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ.

Update: 2024-04-27 08:40 GMT
ಏಪ್ರಿಲ್‌ 29ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದೆ.
Click the Play button to listen to article

ಬೆಂಗಳೂರು: ಏ.29ರಂದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು,ಈ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್‌ಟಿಸಿ) ಆದೇಶ ಹೊರಡಿಸಿದೆ.

ಈ ಕುರಿತು ಕೆಎಸ್ಆರ್‌ಟಿಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಏ.29 ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅವರು ಕೋರಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1 ಈಗಾಗಲೇ ಪೂರ್ಣಗೊಂಡಿದ್ದು, ಫಲಿತಾಂಶ ಸಹ ಪ್ರಕಟವಾಗಿದೆ. ಏ.29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ, ಫಲಿತಾಂಶ ಉನ್ನತೀಕರಣ ಬಯಸುವ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಲಿದೆ. ಮೊದಲನೇ ಪರೀಕ್ಷೆ ನಡೆದ ರೀತಿಯಲ್ಲೆ ಪಾರದರ್ಶಕವಾಗಿ ಪ್ರಾಮಾಣಿಕವಾಗಿ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಒಟ್ಟು 1,49,300 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಇವರಲ್ಲಿ ಫಲಿತಾಂಶ ಉನ್ನತೀಕರಣಕ್ಕಾಗಿ 32,848 ವಿದ್ಯಾರ್ಥಿಗಳು, 27,092 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 84,933 ವಿದ್ಯಾರ್ಥಿಗಳು, 64,367 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗುತ್ತಿದ್ದು, ಕಲಾ ವಿಭಾಗದಲ್ಲಿ 52,492, ವಾಣಿಜ್ಯ ವಿಭಾಗದಲ್ಲಿ 39,427 ಮತ್ತು ವಿಜ್ಞಾನ ವಿಭಾಗದಲ್ಲಿ 57,381 ವಿದ್ಯಾರ್ಥಿಗಳು ರಾಜ್ಯದ 301 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ.

Tags:    

Similar News