ಕಾಂಗ್ರೆಸ್‌ನಲ್ಲಿ ಡಿಕೆಶಿ ಆಟಕ್ಕುಂಟು ಲೆಕ್ಕಕ್ಕಿಲ್ಲವೇ: ಆರ್ ಅಶೋಕ್ ವ್ಯಂಗ್ಯ
ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ ಎಂದು ಪ್ರತಿಪಕ್ಷ ನಾಯಕರು ಹೇಳಿದ್ದಾರೆ;
ಡಿಸಿಎಂ ಡಿಕೆ ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವಾಗ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಆರ್ ಅಶೋಕ್, ಕಾಂಗ್ರೆಸ್‌ನಲ್ಲಿ ನಿಮ್ಮ (ಡಿಕೆ ಶಿವಕುಮಾರ್) ಸ್ಥಿತಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂಬ ತಮ್ಮ ಮಾತನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಹೇಳಿದ್ದಾರೆ.
ಅತ್ತ ಡಿಸಿಎಂ ಡಿಕೆ ಶಿವಕುಮಾರ್ ವಿದೇಶ ಪ್ರವಾಸಕ್ಕೆ ಹೋಗುವುದನ್ನೇ ಕಾಯುತ್ತಿದ್ದ ಸಿಎಂ ಸಿದ್ದರಾಮಯ್ಯ ಬಣ, ಇತ್ತ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ 35 ಶಾಸಕರ ಡಿನ್ನರ್ ಮೀಟಿಂಗ್ ನಡೆಸಿ ಶಕ್ತಿ ಪ್ರದರ್ಶನ ಮಾಡಿದೆ. ಸ್ವಾಮಿ ಡಿಕೆ ಶಿವಕುಮಾರ್ ಅವರೇ, ಅಧಿಕಾರವನ್ನು ಒದ್ದು ಕಿತ್ತುಕೊಳ್ಳುತ್ತೇನೆ ಎಂದು ಸದನದಲ್ಲಿ ತಾವು ಅಬ್ಬರಿಸಿದ್ದನ್ನು ಕಾರ್ಯಗತ ಮಾಡುವ ಸಮಯ ಬಂದಿದೆ ಎಂದು ಅಶೋಕ್ ಹೇಳಿದ್ದಾರೆ.
‘ತಮ್ಮ ಅನುಪಸ್ಥಿತಿಯಲ್ಲಿ ಸಂಪುಟ ಸಭೆ ನಡೆಯುತ್ತದೆ. ಬಸ್ ಟಿಕೆಟ್ ದರ ಶೇ 15 ರಷ್ಟು ಹೆಚ್ಚಿಸುವಂತಹ ಪ್ರಮುಖ ನಿರ್ಧಾರ ಆಗುತ್ತದೆ. ಒಬ್ಬ ಉಪಮುಖ್ಯಮಂತ್ರಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಅನುಪಸ್ಥಿತಿಯಲ್ಲಿ ಇಂತಹ ನಿರ್ಧಾರಗಳು ಆಗುತ್ತೆ ಅಂದರೆ ಏನರ್ಥ? ಕಾಂಗ್ರೆಸ್ ಪಕ್ಷದಲ್ಲಿ ತಾವು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ? ಅಥವಾ ತಮ್ಮ ಅಬ್ಬರ ಏನಿದ್ದರೂ ಮಾಧ್ಯಮಗಳ ಮುಂದೆ ಮಾತ್ರವೇ? ಹೀಗೆ ಮುಂದುವರಿದರೆ ತಮ್ಮ ಕನಸು ಕನಸಾಗಿಯೇ ಉಳಿಯುವುದು ಮಾತ್ರ ಗ್ಯಾರೆಂಟಿ’ ಎಂದು ಅಶೋಕ್ ವ್ಯಂಗ್ಯವಾಡಿದ್ದಾರೆ.
ಸಂಪುಟ ಪುನಾರಚನೆಯ ಚರ್ಚೆ ಜೋರಾಗಿರುವಾಗಲೇ ಹೊಸ ವರ್ಷಾಚರಣೆ ನೆಪದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ, ಸಹೋದ್ಯೋಗಿ ಸಚಿವರು ಹಾಗೂ ಶಾಸಕರಿಗೆ ಗುರುವಾರ ರಾತ್ರಿ ಔತಣಕೂಟ ನೀಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಆದರೆ, ಔತಣಕೂಟಕ್ಕೆ ಡಿ.ಕೆ.ಶಿವಕುಮಾರ್ ಗೈರಾಗಿದ್ದರು. ಜಾರಕಿಹೊಳಿ ಅವರ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ನಡೆದ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಡಾ.ಎಚ್.ಸಿ. ಮಹದೇವಪ್ಪ ಸೇರಿ ಏಳು ಮಂದಿ ಸಚಿವರು, 35 ಮಂದಿ ಶಾಸಕರು ಮಾತ್ರ ಭಾಗವಹಿಸಿದ್ದರು. ಇದು ರಾಜಕೀಯ ವಯಲದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.