ಗದ್ದುಗೆ ಗುದ್ದಾಟ| ಆಪ್ತರಿಂದ ವರದಿ ಪಡೆದ ರಾಹುಲ್; ನಾಯಕತ್ವ ಬದಲಾವಣೆ ಸಾಧಕ-ಬಾಧಕಗಳ ಚರ್ಚೆ
ಸಂಪುಟ ಪುನಾರಚನೆ, ನಾಯಕತ್ವ ಬದಲಾವಣೆ ಮಾಡಿದರೆ ಅದರಿಂದಾಗುವ ಪರಿಣಾಮಗಳು, ಜಾತಿ ಲೆಕ್ಕಾಚಾರ, ಅಹಿಂದ ಮತಗಳ ವಿಭಜನೆ, ಇನ್ನಿತರ ರಾಜಕೀಯ ತಲ್ಲಣಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಜೊತೆ ರಾಜ್ಯ ನಾಯಕರು (ಎಐ ಆಧಾರಿತ ಚಿತ್ರ)
ರಾಜ್ಯ ಕಾಂಗ್ರೆಸ್‌ನಲ್ಲಿ ʼನಾಯಕತ್ವ ಬದಲಾವಣೆʼ ಕುರಿತ ಚರ್ಚೆ ಹಾಗೂ ಗೊಂದಲಗಳಿಗೆ ಪೂರ್ಣ ವಿರಾಮ ಹಾಕಲು ನಿರ್ಧರಿಸಿರುವ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ ವರದಿ ಹೊರತುಪಡಿಸಿಯೂ ತಮ್ಮ ಅತ್ಯಾಪ್ತರಿಂದಲೂ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿರುವ ಗೊಂದಲಗಳ ವರದಿ ತರಿಸಿಕೊಂಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಆಪ್ತರ ದೆಹಲಿ ಯಾತ್ರೆ ಸೇರಿದಂತೆ ಹಲವು ಗೊಂದಲಗಳಿಂದ ಪಕ್ಷದ ವರ್ಚಸ್ಸಿಗೆ ಹಾನಿಯಾಗುತ್ತಿದ್ದು, ಪರಿಹಾರ ಸೂಚಿಸುವುದು ಅನಿವಾರ್ಯ ಎನಿಸಿದೆ. ಹಾಗಾಗಿಯೇ, ರಾಹುಲ್ ಗಾಂಧಿ ಅವರು ತಮ್ಮ ಆಪ್ತರಿಂದಲೂ ವರದಿ ತರಿಸಿಕೊಂಡು ಸಾಧಕ-ಬಾಧಕಗಳ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಹರಿಯಾಣ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರಿಂದ ಸಮಗ್ರ ಮಾಹಿತಿ ಪಡೆದಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಪ್ರತಿ ದಿನ ನಡೆಯುತ್ತಿರುವ ಬೆಳವಣಿಗೆ, ಅಧಿಕಾರ ಹಸ್ತಾಂತರ ಹಾಗೂ ಸಂಪುಟ ಪುನಾರಚನೆ, ಸಿಎಂ ಸಿದ್ದರಾಮಯ್ಯ ಅವರನ್ನು ಬದಲಾವಣೆ ಮಾಡಿದರೆ ಆಗುವ ಪರಿಣಾಮಗಳು, ಜಾತಿ-ಲೆಕ್ಕಾಚಾರ, ಅಹಿಂದ ಮತಗಳ ಪರಿಣಾಮದ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ.
ಒಂದು ವೇಳೆ ನಾಯಕತ್ವ ಬದಲಾವಣೆ ಮಾಡಿ, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದರಿಂದ ಆಗುವ ಪರಿಣಾಮಗಳು ಏನು, ಗ್ರೇಟರ್ ಬೆಂಗಳೂರು ಸೇರಿದಂತೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಸಂಘಟನೆ ಹಾಗೂ ಫಲಿತಾಂಶದ ಮೇಲೆ ಬೀರುವ ಪರಿಣಾಮಗಳ ಕುರಿತಂತೆಯೂ ಮಾಹಿತಿ ಪಡೆದಿದ್ದಾರೆ. ಅಧಿಕಾರ ಹಸ್ತಾಂತರದ ಕುರಿತು ಸಿಎಂ ಹಾಗೂ ಡಿಸಿಎಂ ನಡುವೆ ಯಾವ ರೀತಿ ಸಂಧಾನ ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಡಿ.ಕೆ.ಶಿ. ಸಹಿ ಸಂಗ್ರಹ ನಡೆಗೆ ಬೇಸರ
ನಾಯಕತ್ವ ಬದಲಾವಣೆ ವಿಚಾರದಲ್ಲಿ ಶಾಸಕರ ಬಲ ಪರೀಕ್ಷೆಗಾಗಿ ಡಿ.ಕೆ.ಶಿವಕುಮಾರ್ ಅವರು ಸಹಿ ಸಂಗ್ರಹಕ್ಕೆ ಮುಂದಾಗಿರುವ ಕ್ರಮಕ್ಕೆ ರಾಹುಲ್ ಗಾಂಧಿ ಬೇಸರ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ. ಇಬ್ಬರು ಆಪ್ತರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಪಡೆದಿರುವ ವರದಿ ಕುರಿತಂತೆ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಲ್ ಜೊತೆಯೂ ಚರ್ಚಿಸಿದ್ದಾರೆ. ಪ್ರಸ್ತುತ ಕರ್ನಾಟಕ ರಾಜಕಾರಣದಲ್ಲಿ ನಡೆಯುತ್ತಿರುವ ವಿದ್ಯಮಾನಗಳು, ನಾಯಕತ್ವ ಬದಲಾವಣೆಯ ಅನಿವಾರ್ಯತೆ, ಸಾಧಕ ಬಾಧಕಗಳನ್ನು ವಿಮರ್ಶಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಸಿದ್ದರಾಮಯ್ಯಗೆ ಪರ್ಯಾಯವೇನು ?
ಅಹಿಂದ ನಾಯಕ ಎಂದೇ ಬಿಂಬಿಸಿಕೊಂಡಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದರೆ ಅವರಿಗೆ ಪರ್ಯಾಯವಾಗಿ ಯಾವ ಜವಾಬ್ದಾರಿ ಕೊಡಬೇಕು ಎಂಬುದು ಹೈಕಮಾಂಡ್‌ಗೆ ತಲೆನೋವಾಗಿದೆ. ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ಮತಗಳು ಸಿದ್ದರಾಮಯ್ಯ ಪರವಾಗಿವೆ. ಜೊತೆಗೆ ಕುರುಬ ಜನಾಂಗದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಕಾಂಗ್ರೆಸ್‌ಗೆ ಸಿದ್ದರಾಮಯ್ಯ ಅವರ ನಾಯಕತ್ವ ಅನಿವಾರ್ಯ ಎಂಬುದು ಸತ್ಯ. ಹೀಗಿರುವಾಗ ಮುಂದೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ʼದಲಿತ ಸಿಎಂʼ ಕಾರ್ಡ್ ಪ್ರಯೋಗಿಸುವರೇ ಸಿಎಂ
ಒಂದು ವೇಳೆ ಹೈಕಮಾಂಡ್, ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ದಲಿತ ಸಿಎಂ ಕಾರ್ಡ್ ಪ್ರಯೋಗಿಸುವ ಕುರಿತು ಸಿಎಂ ಸಿದ್ದರಾಮಯ್ಯ ಆಪ್ತ ಬಣದಲ್ಲಿ ನಿರ್ಧರಿಸಲಾಗಿದೆ. ಯಾವುದೇ ಕಾರಣಕ್ಕೂ ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗರಬಾರದು ಎಂಬ ಉದ್ದೇಶದಿಂದ ʼದಲಿತ ಸಿಎಂʼ ಕಾರ್ಡ್ ಪ್ರಯೋಗಿಸುವ ಸಾಧ್ಯತೆ ಇದೆ. ಇದರ ಭಾಗವಾಗಿಯೇ ಕಳೆದ ಕೆಲವು ತಿಂಗಳಿಂದ ಸಿಎಂ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಡಾ.ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಹಾಗೂ ಹೆಚ್.ಸಿ.ಮಹದೇವಪ್ಪ ಅವರು ರಹಸ್ಯ ಸಭೆ ನಡೆಸಿರುವುದು ಇದಕ್ಕೆ ಪುಷ್ಠಿ ನೀಡುವಂತಿದೆ.
ಅಧಿಕಾರದ ಹಸ್ತಾಂತರದ ಬೆಳವಣಿಗೆಗೆಳು ನಡೆಯುತ್ತಿರುವ ವೇಳೆಯಲ್ಲೇ ನಾನೂ ಸಿಎಂ ಸ್ಥಾನದ ರೇಸ್‌ನಲ್ಲಿದ್ದೇನೆ ಎಂದು ಡಾ.ಜಿ. ಪರಮೇಶ್ವರ್ ಹೇಳಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ತಂದೆಯ ಉತ್ತಾರಾಧಿಕಾರಿ ಸತೀಶ್ ಜಾರಕಿಹೊಳಿ ಅವರು. ಜಾತ್ಯಾತೀತ ತತ್ವಗಳಲ್ಲಿ ನಂಬಿಕೆ ಇಟ್ಟಿರುವುದರಿಂದ ಸತೀಶ್ ಅವರೇ ಅಹಿಂದ ಸಮುದಾಯವನ್ನು ಮುನ್ನಡೆಸಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಇದು ಕಾಂಗ್ರೆಸ್‌ನಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು.