ನಾಳೆ ಬೆಂಗಳೂರು ನ್ಯಾಯಾಲಯಕ್ಕೆ ರಾಹುಲ್‌ ಗಾಂಧಿ ಹಾಜರು

Update: 2024-06-06 14:25 GMT

ಕಾಂಗ್ರೆಸ್‌ ರಾಷ್ಟ್ರೀಯ ನಾಯಕ ರಾಹುಲ್‌ ಗಾಂಧಿ ಶುಕ್ರವಾರ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿ ಬಿಜೆಪಿ ದಾಖಲಿಸಿದ್ದ ಖಾಸಗಿ ಮಾನನಷ್ಟ ಮೊಕದ್ದಮೆ ಸಂಬಂಧ ಸಿಟಿ ಸಿವಿಲ್‌ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ.

ಬಿಜೆಪಿ ತನ್ನ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ವಿರುದ್ಧ ಪ್ರಕರಣ ದಾಖಲಿಸಿತ್ತು.

2023ರಲ್ಲಿ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಲಿದ್ದಾರೆ. ವಿಧಾನ ಪರಿಷತ್‌ ಸದಸ್ಯ ಬಿಜೆಪಿ ಮುಖಂಡ ಕೇಶವ ಪ್ರಸಾದ್ ಅವರು ಈ ಸಂಬಂಧ ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

'ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ' ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು. ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದರು.

ಪ್ರಕರಣವೇನು?

“2023ರಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿ, ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40ರಷ್ಟು ಕಮೀಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ ಎಂದು ಆರೋಪಿಸಿದ್ದರು. 'ಈ ಆರೋಪಕ್ಕೆ ಫಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ' ಎಂದು ಈ ಖಾಸಗಿ ದೂರು ದಾಖಲಿಸಲಾಗಿದೆ.

ನ್ಯಾಯಾಲಯಕ್ಕೆ ಹಾಜರಾದ ಬಳಿಕ ರಾಹುಲ್‌ ಗಾಂಧಿ ಅವರು ಕ್ವೀನ್ಸ್ ರಸ್ತೆಯಲ್ಲಿರುವ ಭಾರತ್ ಜೋಡೋ ಭವನದಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ರಾಜ್ಯ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಹ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Tags:    

Similar News