ರಾಯಚೂರು: ಶಾಲಾ ವಾಹನ – ಬಸ್ ಢಿಕ್ಕಿ; ಇಬ್ಬರು ವಿದ್ಯರ್ಥಿಗಳು ಸಾವು, 15ವಿದ್ಯಾರ್ಥಿಗಳಿಗೆ ಗಾಯ
ಕೆಎಸ್ಆರ್‌ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.;
ಕೆಎಸ್ಆರ್ಟಿಸಿ ಬಸ್ ಮತ್ತು ಶಾಲಾ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ೧೫ ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.
ಶಾಲಾ ಮಕ್ಕಳನ್ನು ಕರೆದುಕೊಂಡು ಮಾನ್ವಿಯ ಲೊಯೋಲ್ ಶಾಲೆಗೆ ತೆರಳುತ್ತಿದ್ದ ವಾಹನಕ್ಕೆ ಮಾನ್ವಿ ಪಟ್ಟಣದಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಲೊಯಲ್ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಅಮರೇಶ (7) ಹಾಗೂ ಶ್ರೀಕಾಂತ ಮಾರೇಶ (12) ಮೃತಪಟ್ಟಿದ್ದಾರೆ. ಒಬ್ಬ ಬಾಲಕ ಹಾಗೂ ಚಾಲನಕನ ಸ್ಥಿತಿ ಗಂಭೀರವಾಗಿದೆ. ಭೀಕರ ಅಪಘಾತದಲ್ಲಿ ಮೂರು ಮಕ್ಕಳ ಕಾಲುಗಳು ಛಿದ್ರವಾಗಿದೆ. 32 ಜನರ ಪೈಕಿ 18 ಗಾಯಾಳುಗಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತು 14 ವಿದ್ಯಾರ್ಥಿಗಳಿಗೆ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೋಷಕರು ಬಂದು ರೋಧಿಸಿದ್ದು, ಮಕ್ಕಳ ಪರಿಸ್ಥಿತಿ ನೋಡಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಕೆ.ನಿತೇಶ್ ಭೇಟಿ ನೀಡಿದ್ದು, ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗಾಯಗೊಂಡ ಮಕ್ಕಳ ಚಿಕಿತ್ಸೆಗೆ ತಲಾ 3 ಲಕ್ಷ ರೂ. ನೆರವು ನೀಡಲಾಗುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.