ಬೆಂಗಳೂರಿಗೆ ತಂಪೆರೆದ ಜಿಟಿಜಿಟಿ ಮಳೆ; ರಾಜ್ಯದಲ್ಲಿ 'ದಿತ್ವಾ' ಚಂಡಮಾರುತದ ಎಫೆಕ್ಟ್
ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ಇದ್ದರೂ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ರಾಯಚೂರು ಸೇರಿದಂತೆ ಒಣ ಹವೆ ಮುಂದುವರಿಯಲಿದೆ. ಈ ಭಾಗಗಳಲ್ಲಿ ಬಿಸಿಲು ಮತ್ತು ರಾತ್ರಿ ವೇಳೆ ಚಳಿ ಹೆಚ್ಚಾಗಲಿದೆ.
ಬೆಂಗಳೂರಿನಲ್ಲಿ ತುಂತುರು ಮಳೆಯಾಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಕಳೆದ ವಾರ ಶ್ರೀಲಂಕಾಗೆ ಅಪ್ಪಳಿಸಿದ್ದ ಚಂಡಮಾರುತದ ಪ್ರಭಾವ ಇನ್ನೂ ಮಾಸಿಲ್ಲದಿರುವುದರಿಂದ ನಗರದ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬಂದಿದೆ. ಇದರ ಪರಿಣಾಮವಾಗಿ ಉಷ್ಣಾಂಶದಲ್ಲಿ ಭಾರೀ ಇಳಿಕೆಯಾಗಿದ್ದು, ಇಂದು ಬೆಳಿಗ್ಗೆಯಿಂದಲೇ ನಗರದ ಹಲವೆಡೆ ಮತ್ತೆ ಜಿಟಿಜಿಟಿ ಮಳೆ ಆರಂಭವಾಗಿದೆ.
ಪ್ರಮುಖವಾಗಿ ಮಲ್ಲೇಶ್ವರಂ, ಮೆಜೆಸ್ಟಿಕ್, ಶಾಂತಿನಗರ ಹಾಗೂ ಯಶವಂತರಪುರ ಸೇರಿದಂತೆ ಹಲವು ಬಡಾವಣೆಗಳಲ್ಲಿ ತುಂತುರು ಮಳೆ ಸುರಿಯುತ್ತಿದ್ದು, ವಾಹನ ಸವಾರರು ಮತ್ತು ಕಚೇರಿಗೆ ತೆರಳುವವರು ಪರದಾಡುವಂತಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದು ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 17 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗುವ ಸಾಧ್ಯತೆಯಿದೆ. ಹಗಲಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಸಂಜೆಯ ವೇಳೆಗೆ ಚಳಿ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.
ವರುಣನ ಅಬ್ಬರ ಸಾಧ್ಯತೆ
ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರೆಡೆಗಳಲ್ಲೂ ಮಳೆಯ ಆರ್ಭಟ ಮುಂದುವರಿದಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆ, 'ದಿತ್ವಾ' ಚಂಡಮಾರುತದ ಪರಿಣಾಮವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಲಿದೆ. ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಎಚ್ಚರಿಸಿದೆ.
ದಕ್ಷಿಣ ಕರ್ನಾಟಕದಲ್ಲಿ ಮಳೆಯ ವಾತಾವರಣವಿದ್ದರೆ, ಉತ್ತರ ಒಳನಾಡಿನಲ್ಲಿ ಸಂಪೂರ್ಣ ವಿಭಿನ್ನವಾದ ಹವಾಮಾನವಿದೆ. ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಈ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ, ಹಗಲಿನಲ್ಲಿ ಸಾಧಾರಣ ಬಿಸಿಲು ಹಾಗೂ ರಾತ್ರಿ ವೇಳೆ ಚಳಿಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.