ಮಳೆ ಅಬ್ಬರ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌, ಶಾಲೆಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.;

Update: 2025-08-29 05:50 GMT

ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರಿದಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಘೋಷಿಸಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. 

ಬೀದರ್, ಕಲಬುರಗಿ, ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ನೀಡಿದೆ. ಉಳಿದಂತೆ ವಿಜಯಪುರ, ಯಾದಗಿರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ವಿಜಯನಗರ, ಬಳ್ಳಾರಿ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಮತ್ತು ಬೆಂಗಳೂರು ಉತ್ತರ ಸೇರಿದಂತೆ 22 ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ.

ಹಲವೆಡೆ ಶಾಲಾ ಕಾಲೇಜಿಗೆ ರಜೆ ಘೋಷಣೆ

ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆ, ಅಂಗನವಾಡಿ ಮತ್ತು ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟರಾಜಾ ಅವರು ರಜೆ ಘೋಷಿಸಿದ್ದಾರೆ. 

ಬೀದರ್ ಜಿಲ್ಲೆಯಾದ್ಯಂತ ಪ್ರವಾಹದಂತಹ ಪರಿಸ್ಥಿತಿ ಉಂಟಾಗಿದೆ. ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. 

ಉತ್ತರ ಕನ್ನಡ ಜಿಲ್ಲೆಯ ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ, ಈ ಮೂರು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ಭಾರೀ ಮಳೆ

ಬೆಂಗಳೂರಿನಲ್ಲಿ ಗುರುವಾರ ಭಾರೀ ಮಳೆಯಾಗಿದ್ದು, ಕಾರ್ಪೊರೇಷನ್ ಸರ್ಕಲ್, ಸಂಪಂಗಿರಾಮನಗರ, ಕೆಆರ್ ಮಾರ್ಕೆಟ್, ಮಾವಳ್ಳಿ, ಶಾಂತಿನಗರ, ಡಬಲ್ ರೋಡ್, ಬಸವನಗುಡಿ, ಬಸವೇಶ್ವರ, ರಾಜಾಜಿನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದಿದೆ.

ಶುಕ್ರವಾರ ಕೂಡ ಮಳೆಯ ಆರ್ಭಟ ಹೆಚ್ಚಾಗುವ ಸಾಧ್ಯತೆ ಇದೆ.ಬೆಂಗಳೂರಲ್ಲಿ ತಿಂಗಳ ಅಂತ್ಯದ ವೇಳೆಗೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಆಗಸ್ಟ್ 31 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 1 ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:    

Similar News