ರಮ್ಯಾಗೆ ಅಶ್ಲೀಲ ಸಂದೇಶ ಪ್ರಕರಣ : ಬಂಧಿತರ ಸಂಖ್ಯೆ 12ಕ್ಕೆ ಏರಿಕೆ
ನಟಿ ರಮ್ಯಾ ತಮ್ಮ ದೂರಿನಲ್ಲಿ 40ಕ್ಕೂ ಹೆಚ್ಚು ಅಕೌಂಟ್ ವಿವರ ನೀಡಿದ್ದರು. ಅವುಗಳಲ್ಲಿ 12 ಅಕೌಂಟ್‌ಗಳ ಮಾಹಿತಿಯ ಆಧಾರದ ಮೇಲೆ 12 ಆರೋಪಿಗಳನ್ನು ಬಂಧಿಸಿದ್ದಾರೆ.;
ನಟಿ ರಮ್ಯಾ
ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಹಲವರ ಹೆಡೆಮುರಿ ಕಟ್ಟಿದ್ದಾರೆ. ಆ ಮೂಲಕ ಒಟ್ಟು ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.
ವಿಜಯಪುರ, ಚಿತ್ರದುರ್ಗ, ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ 9 ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು, ಇದೀಗ ಉತ್ತರ ಕರ್ನಾಟಕ ಮೂಲದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
ನಟಿ ರಮ್ಯಾ ತಮ್ಮ ದೂರಿನಲ್ಲಿ 40ಕ್ಕೂ ಹೆಚ್ಚು ಅಕೌಂಟ್ ವಿವರಗಳನ್ನು ನೀಡಿದ್ದರು. 12 ಅಕೌಂಟ್‌ಗಳ ಮಾಹಿತಿ ಆಧಾರದ ಮೇಲೆ 12 ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೆ 10ಕ್ಕೂ ಹೆಚ್ಚು ಇನ್‌ಸ್ಟಾಗ್ರಾಂ ಖಾತೆಗಳ ಮಾಹಿತಿ ಪಡೆದು, ತೀವ್ರ ಶೋಧ ನಡೆಸುತ್ತಿದ್ದಾರೆ.
ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದರೆ, ಉಳಿದವರು ತಮ್ಮ ಅಕೌಂಟ್‌ನಲ್ಲಿನ ಕಮೆಂಟ್‌ಗಳನ್ನು ಡಿಲೀಟ್ ಮಾಡಿ ತಲೆಮರೆಸಿಕೊಂಡಿದ್ದಾರೆ. ಹೀಗಾಗಿ, ಪೊಲೀಸರು ಆರೋಪಿಗಳ ಟವರ್ ಲೊಕೇಷನ್ ಪತ್ತೆ ಹಚ್ಚಿ, ಬಂಧನಕ್ಕೆ ಬಲೆ ಬೀಸಿದ್ದಾರೆ.
ಪ್ರಕರಣದ ಹಿನ್ನೆಲೆ
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ತಮ್ಮ 'ಎಕ್ಸ್' ಖಾತೆಯಲ್ಲಿ, "ಭಾರತದ ಸಾಮಾನ್ಯ ಜನರಿಗೆ ಸುಪ್ರೀಂಕೋರ್ಟ್ ಒಂದು ಭರವಸೆಯ ಕಿರಣವಾಗಿದೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿದೆ ಎಂಬ ಸಂಪೂರ್ಣ ನಂಬಿಕೆ ಇದೆ," ಎಂದು ಪೋಸ್ಟ್ ಮಾಡಿದ್ದರು. ಈ ಪೋಸ್ಟ್‌ನಿಂದ ಕೆರಳಿದ ದರ್ಶನ್ ಅಭಿಮಾನಿಗಳಲ್ಲಿ ಕೆಲವರು ರಮ್ಯಾ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ನಿಂದನೆ ಮತ್ತು ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ರಮ್ಯಾ ಅವರು ಕಾನೂನು ಕ್ರಮಕ್ಕೆ ಮುಂದಾಗಿದ್ದರು. ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.