ಕಸ್ತೂರಿ ರಂಗನ್ ವರದಿ | ತಿರಸ್ಕರಿಸುವ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ
ಕಸ್ತೂರಿ ರಂಗನ್ ವರದಿ ತಿರಸ್ಕಾರದ ಕುರಿತು ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿರುವುದು ರಾಜ್ಯ ಸರ್ಕಾರದ ಹಿಂದಿನ ನಿರ್ಧಾರವನ್ನು ಪುನರ್ ಪರಿಶೀಲಿಸುವ ಸೂಚನೆ ನೀಡಿದೆ.;
ಡಾ. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ತೀರ್ಮಾನವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕವೂ ಸೇರಿದಂತೆ ದೇಶದ ಪಶ್ಚಿಮಘಟ್ಟ ವ್ಯಾಪ್ತಿಯ ಆರು ರಾಜ್ಯಗಳ 56 ಸಾವಿರ ಚದರ ಕಿಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಡಾ ಕಸ್ತೂರಿ ರಂಗನ್ ಅವರು ನೀಡಿದ ಶಿಫಾರಸಿನ ಪ್ರಕಾರ, ಕೇಂದ್ರ ಸರ್ಕಾರ ಇದೀಗ ಐದನೇ ಬಾರಿಗೆ ಅಧಿಸೂಚನೆ ಹೊರಡಿಸಿದೆ. ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಗೆ ಕರ್ನಾಟಕ, ಕೇರಳ, ತಮಿಳುನಾಡು, ಗೋವಾ ಸೇರಿದಂತೆ ಬಹುತೇಕ ರಾಜ್ಯಗಳು ವಿರೋಧ ವ್ಯಕ್ತಪಡಿಸುತ್ತಲೇ ಇವೆ. ಕರ್ನಾಟಕ ಸರ್ಕಾರ ಕೂಡ ಕಳೆದ ಬಾರಿಯ ಅಧಿಸೂಚನೆಯನ್ನು ಸಾರಾಸಗಟಾಗಿ ತಿರಸ್ಕರಿಸಿತ್ತು.
ಆ ಹಿನ್ನೆಲೆಯಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಸ್ತೂರಿ ರಂಗನ್ ವರದಿ ತಿರಸ್ಕಾರದ ಕುರಿತು ಮತ್ತೊಮ್ಮೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿರುವುದು ರಾಜ್ಯ ಸರ್ಕಾರದ ಹಿಂದಿನ ನಿರ್ಧಾರವನ್ನು ಪುನರ್ ಪರಿಶೀಲಿಸುವ ಸೂಚನೆ ನೀಡಿದೆ.
ಮಡಿಕೇರಿಯಲ್ಲಿ ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ʻʻಪ್ರವಾಹ ಪರಿಸ್ಥಿತಿಯಲ್ಲಿ ತುರ್ತು ಪರಿಹಾರ ಕಾರ್ಯಗಳಿಗಾಗಿ ರಾಜ್ಯದಲ್ಲಿ 746 ಕೋಟಿ ಮತ್ತು ಮಡಿಕೇರಿ ಜಿಲ್ಲಾ ಪಿಡಿ ಖಾತೆಯಲ್ಲಿ 46 ಕೋಟಿ ಹಣ ಇದೆ. ಅಗತ್ಯಬಿದ್ದರೆ ಇನ್ನೂ ಹೆಚ್ಚಿನ ಹಣ ನೀಡಲಾಗುವುದುʼʼ ಎಂದು ಹೇಳಿದರು.
ʻʻಮಳೆ ಬೀಳುತ್ತಲೇ ಇರುವುದರಿಂದ ಭೂ ಕುಸಿತದ ಪ್ರದೇಶವನ್ನು ಸರಿಪಡಿಸಲು ಕಷ್ಟ ಆಗುತ್ತಿದೆ. 20 ಕಡೆ ಭೂ ಕುಸಿತ ಆಗಿದ್ದರೆ, ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿರುವುದು ಹೆಚ್ಚು ಕಡೆ ಆಗಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆʼʼ ಎಂದು ತಿಳಿಸಿದರು.
ʻʻ67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. ಕಳೆದ 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಪರಿಹಾರದ ಜೊತೆಗೆ ಮನೆ ಕಟ್ಟಿ, ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು. ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ ಎಂದರು. ಈಗಾಗಲೇ ನೇರ ಸಂತ್ರಸ್ತರ ಖಾತೆಗೆ ಹಣ ವರ್ಗಾವಣೆ ಆಗಿದೆʼʼ ಎಂದು ಮಾಹಿತಿ ನೀಡಿದರು.
ʻʻ16 ಜಾನವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಸಂಪರ್ಕದಲ್ಲಿ ಇದ್ದೇನೆʼʼ ಎಂದರು.
ʻʻ28 ಹೆಕ್ಟೇರ್ ನಲ್ಲಿ ತೋಟಗಾರಿಕಾ ಬೆಳೆ ಹಾನಿಯಾಗಿದೆ. ಕಾಫಿ ಬೋರ್ಡ್ ಮತ್ತು ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. 2708 ವಿದ್ಯುತ್ ಕಂಬಗಳು ಬಿದ್ದು ಹೋಗಿವೆ. ಹಾಳಾಗಿದ್ದ 47 ಟ್ರಾನ್ಸ್ ಫಾರ್ಮರ್ ಗಳನ್ನೂ ಹೊಸದಾಗಿ ಅಳವಡಿಸಲಾಗಿದೆʼʼ ಎಂದು ಹೇಳಿದರು.
ʻʻ344 ಕಿಮೀ ಉದ್ದದ ಲೋಕೋಪಯೋಗಿ, ಜಿಲ್ಲಾ ಪಂಚಾಯ್ತಿ ರಸ್ತೆಗಳು ಹಾನಿ ಆಗಿವೆ. ಇವೆಲ್ಲವನ್ನೂ ಆದ್ಯತೆ ಮೇಲೆ ಸರಿ ಪಡಿಸಲು ಸೂಚಿಸಲಾಗಿದೆ. ಈ ಬಾರಿ ವಾಡಿಕೆಗಿಂತ ಶೇ 50 ರಷ್ಟು ಹೆಚ್ಚು ಮಳೆಯಾಗಿದೆ. ಮುಂಜಾಗ್ರತಾ ಕ್ರಮಗಳ ಜೊತೆಗೆ ಅನಾಹುತ ಬಳಿಕ ಪರಿಹಾರ ಕಾರ್ಯಗಳನ್ನು ತುರ್ತಾಗಿ ನಡೆಸಲಾಗುತ್ತಿದೆʼʼ ಎಂದು ತಿಳಿಸಿದರು.