ಕಾರ್ಮಿಕರ ಮಕ್ಕಳಿಗೆ ಪ್ರತಿ ಜಿಲ್ಲೆಯಲ್ಲಿ ವಸತಿ ಶಾಲೆ: ಸಂಪುಟ ಸಭೆಯಲ್ಲಿ ತೀರ್ಮಾನ
ಕಾರ್ಮಿಕರ ಮಕ್ಕಳ ಶಿಕ್ಷಣ ಉತ್ತೇಜಿಸಲು ಸರ್ಕಾರವು ವಸತಿ ಶಾಲೆಗಳ ನಿರ್ಮಾಣಕ್ಕೆ1125.25 ಕೋಟಿ ರೂ. ಮಂಜೂರು;
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿನಿರ್ಸಲು ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ನಿರ್ಣಯ ಕೈಗೊಂಡಿದೆ.
ನಂದಿಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಮತ್ತು ಆ ಮಕ್ಕಳನ್ನು ಶಿಕ್ಷಣಕ್ಕೆ ಉತ್ತೇಜಿಸಲು ಸರ್ಕಾರವು ವಸತಿ ಶಾಲೆಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲು ಮುಂದಾಗಿದೆ. ಈ ಸಂಬಂಧ ಪ್ರತಿ ಜಿಲ್ಲೆಯಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆ ನಿರ್ಮಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸಚಿವ ಸಂಪುಟ ಸಭೆಯು 1125.25 ಕೋಟಿ ರೂಪಾಯಿ ಮಂಜೂರು ಮಾಡಿದೆ.
ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ರಾಜ್ಯದ ೩೧ ಜಿಲ್ಲೆಗಳಲ್ಲಿ ೬ನೇ ತರಗತಿಯಿಂದ ೧೨ ತರಗತಿಯಲ್ಲಿ ಓದುತ್ತಿರುವ ಮಂಡಳಿಯ ಫಲಾಣುಭವಿಗಳ ಮಕ್ಕಳಿಗೆ ನಿರ್ಮಿಸಲಾಗುವುದು. ಕಾರ್ಮಿಕ ಮಕ್ಕಳಿಗೆ ವಸತಿ ಶಾಲೆಗಳನ್ನು ನಿರ್ಮಿಸಿ ವಿದ್ಯಾಭ್ಯಾಸವನ್ನು ನೀಡಿದರೆ ಸಂವಿಧಾನದಲ್ಲಿ ಅವರಿಗೆ ನೀಡಿರುವ ಮತ್ತು ಮೂಲಭೂತ ಹಕ್ಕನ್ನು ಅನುಷ್ಠಾನ ಮಾಡಿದಂತಾಗುತ್ತದೆ.
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ 1125.25 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಹಿಂದುಳಿದ ವರ್ಗದ ಅಭ್ಯರ್ಥಿಗಳು ಐಎಎಸ್, ಐಪಿಎಸ್, ಐಆರ್‌ಎಸ್ ಸೇರಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗಾಗಿ 10 ಕೋಟಿ ರೂಪಾಯಿ ವೆಚ್ಚದ ಎರಡು ವಸತಿ ಶಾಲೆ ಬೆಂಗಳೂರಿನಲ್ಲಿ ನಿರ್ಮಿಸಲು ನಿರ್ಣಯಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧರಾಗುವ ವಿದ್ಯಾರ್ಥಿಗಳು ಬೆಂಗಳೂರಿಗೆ ತರಬೇತಿಗಾಗಿ ಆಗಮಿಸುತ್ತಾರೆ. ಈ ವೇಳೆ ತರಬೇತಿಗಾಗಿ ಬರುವವರಿಗೆ ವಸತಿ ಸಮಸ್ಯೆ ಎದುರಾಗುತ್ತದೆ. ಈ ಸಮಸ್ಯೆ ತಲೆದೋರದಂತೆ ಕ್ರಮ ಕೈಗೊಳ್ಳಲು ಸರ್ಕಾರ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ 10 ಕೋಟಿ ರೂಪಾಯಿ ವೆಚ್ಚದಲ್ಲಿ ಎರಡು ವಸತಿ ನಿಲಯ ನಿರ್ಮಿಸಲು ತೀರ್ಮಾನಿಸಿದೆ.
ರಾಜ್ಯದಲ್ಲಿ ಸ್ಥಾಪನೆ ಮಾಡಲಾದ ಹೊಸ ತಾಲೂಕುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲ. ಇದನ್ನು ಮನಗಂಡ ರಾಜ್ಯ ಸರ್ಕಾರವು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಇಲ್ಲದ ಹೊಸ ತಾಲೂಕುಗಳಲ್ಲಿ ಕಮ್ಯೂನಿಟಿ ಆರೋಗ್ಯ ಕೇಂದ್ರಗಳನ್ನು ಆರಂಭಿಸಲು ನಿರ್ಣಯಿಸಲಾಗಿದೆ. ಆರೋಗ್ಯ ಇಲಾಖೆ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 46 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಹಾಗೂ 21.40 ಕೋಟಿ ರೂಪಾಯಿ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿಯಲ್ಲಿನ ಮೆಡಿಕಲ್ ಕಾಲೇಜುಗಳಿಗೆ ಎಂಆರ್ ಐ ಯಂತ್ರಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. 56 ಕೋಟಿ ರೂ ವೆಚ್ಚದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೈವಾರ ಪಿಎಚ್‌ಸಿ ಮತ್ತು ಮಂಚೇನಹಳ್ಳಿಯ ಆಸ್ಪತ್ರೆಗಳನ್ನು ಉನ್ನತೀಕರಿಸಲು ಹಾಗೂ ಹೆಚ್ಚುವರಿ ಕಾಮಗಾರಿ ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ. ಇದಲ್ಲದೇ, ಒಟ್ಟಾರೆ 123 ಕೋಟಿ ರೂ ವೆಚ್ಚದಲ್ಲಿ ಆರೋಗ್ಯ ಸಂಬಂಧಿತ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ.
ಈ ನಡುವೆ, ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡಲಾಗಿದ್ದು, ಇದಕ್ಕಾಗಿ 1627.25 ಕೋಟಿ ರೂಪಾಯಿ ನೀಡಿದ್ದೇವೆ. ಇದರಲ್ಲಿ ಕಾಲೇಜು, ವಿಶ್ವವಿದ್ಯಾಲಯಗಳ ಮೂಲಭೂತ ಸೌಕರ್ಯ ಒದಗಿಸಲಾಗುತ್ತದೆ.