ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಸ್ಕೂಟರ್ ಸವಾರ ದಾರುಣ ಸಾವು
ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಮೇಲ್ಸೇತುವೆಯತ್ತ ಸಾಗುತ್ತಿದ್ದ ಬಿಎಂಟಿಸಿ ಬಸ್, ಸೈಯದ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ.;
ಸಾಂದರ್ಭಿಕ ಚಿತ್ರ
ನಗರದ ಹೊಸೂರು ಮುಖ್ಯರಸ್ತೆಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಿಎಂಟಿಸಿ ಬಸ್ ಚಕ್ರಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡ ದುರ್ದೈವಿಯನ್ನು 33 ವರ್ಷದ ಸೈಯದ್ ಜಾಫರ್ ಹುಸೇನ್ ಎಂದು ಗುರುತಿಸಲಾಗಿದೆ.
ರೂಪೇನ ಅಗ್ರಹಾರ ಬಸ್ ನಿಲ್ದಾಣದ ಬಳಿ ಈ ದುರ್ಘಟನೆ ಸಂಭವಿಸಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಮೇಲ್ಸೇತುವೆಯತ್ತ ಸಾಗುತ್ತಿದ್ದ ಬಿಎಂಟಿಸಿ ಬಸ್, ಸೈಯದ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನಿಂದ ಕೆಳಗೆ ಬಿದ್ದ ಸೈಯದ್ ಅವರ ಮೇಲೆ ಬಸ್‌ನ ಚಕ್ರಗಳು ಹರಿದು, ಅವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ, ಬಸ್ ಚಾಲಕ ಆರ್. ಜಯರಾಮಯ್ಯ ಅವರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಮಡಿವಾಳ ಸಂಚಾರ ಠಾಣೆಯ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಮೃತ ಸೈಯದ್ ಅವರ ದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.