ಬೆಂಗಳೂರು ಸೀಟ್ ಬ್ಲಾಕಿಂಗ್ ಹಗರಣ: ಇಡಿ ದಾಳಿ, 1.37 ಕೋಟಿ ರೂಪಾಯಿ ವಶ
ಅಕ್ರಮ ಹಣ ವರ್ಗಾವಣೆ ಆರೋಪದಡಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿದ 17 ಸ್ಥಳಗಳಲ್ಲಿ ಇಡಿ ಶೋಧನೆ.;
ಬೆಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ನಡೆಯುತ್ತಿದ್ದ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ನಡೆಸಿದ ದಾಳಿಯಲ್ಲಿ ಮಹತ್ವದ ದಾಖಲೆಗಳು, ಡಿಜಿಟಲ್ ಸಾಧನಗಳು ಮತ್ತು 1.37 ಕೋಟಿ ನಗದನ್ನು ವಶಪಡಿಸಿಕೊಂಡಿದೆ.
ಇಡಿ ಅಧಿಕಾರಿಗಳು ಬಿಎಂಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್, ಆಕಾಶ್ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿ, ಹಾಗೂ ನ್ಯೂ ಹಾರಿಜನ್ ಕಾಲೇಜ್ ಆಫ್ ಎಂಜಿನಿಯರಿಂಗ್ಗೆ ಸೇರಿದ 17 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದರು. ಅಕ್ರಮ ಹಣ ವರ್ಗಾವಣೆ ಆರೋಪದಡಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಕೆಲವು ವ್ಯಕ್ತಿಗಳು ಈ ಸಂಸ್ಥೆಗಳೊಂದಿಗೆ ಸಂಬಂಧ ಹೊಂದಿದ್ದು, ಸೀಟ್ ಬ್ಲಾಕಿಂಗ್ ಅಕ್ರಮದಲ್ಲಿ ತೊಡಗಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು.
ದಾಳಿ ವೇಳೆ, ಖಾಸಗಿ ಸಂಸ್ಥೆಗಳಲ್ಲಿ ಜನಪ್ರಿಯ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಯಲ್ಲಿ ವ್ಯಾಪಕ ಸೀಟ್ ಬ್ಲಾಕಿಂಗ್ ಮತ್ತು ನಗದು ಬಳಕೆಯಾಗಿರುವುದಕ್ಕೆ ಸಾಕ್ಷಿಗಳು ಲಭ್ಯವಾಗಿವೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ. ಶೋಧ ಕಾರ್ಯಾಚರಣೆ ವೇಳೆ ಡಿಜಿಟಲ್ ಸಾಧನಗಳು ಮತ್ತು ₹1.37 ಕೋಟಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಇತ್ತೀಚೆಗೆ ಶಿಕ್ಷಣವು ವ್ಯಾಪಾರೀಕರಣಗೊಂಡಿದ್ದು, ವೃತ್ತಿಪರ ಕೋರ್ಸ್ಗಳ ಸೀಟು ಹಂಚಿಕೆಯಲ್ಲಿ ಭಾರೀ ಅಕ್ರಮಗಳು ನಡೆಯುತ್ತಲೇ ಇವೆ ಎಂಬ ಆರೋಪಗಳಿವೆ. ರಾಜ್ಯದಲ್ಲಿ ಸಿಇಟಿ ಫಲಿತಾಂಶ ಹೊರಬಿದ್ದ ಬಳಿಕ ಲಕ್ಷಾಂತರ ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜುಗಳಲ್ಲಿ ಸೀಟು ಪಡೆಯುವ ಕನಸು ಹೊತ್ತಿದ್ದರು. ಆದರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎಂಜಿನಿಯರಿಂಗ್ ಸೀಟು ಹಂಚಿಕೆ ಪಟ್ಟಿ ಬಿಡುಗಡೆ ಮಾಡುವ ಮುನ್ನವೇ ಹಲವೆಡೆ ಸೀಟುಗಳು ಬ್ಲಾಕ್ ಆಗುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಈ ದಾಳಿ ನಡೆಸಿದ್ದರು.