ಚನ್ನಪಟ್ಟಣ ಸಮೀಪ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಒಬ್ಬ ಸಾವು, ನಾಲ್ವರು ಗಂಭೀರ

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡ ಯುವಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.;

Update: 2025-05-11 12:16 GMT
ಚನ್ನಪಟ್ಟಣ ಸಮೀಪ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿ, ಒಬ್ಬ ಸಾವು, ನಾಲ್ವರು ಗಂಭೀರ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಪಾಂಡುಪುರ ಗ್ರಾಮದ ಸಮೀಪ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಹೆಬ್ಬಾಳ ಮೂಲದ ಮೋಹನ್ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಕಬ್ಬಾಳು ದೇವಸ್ಥಾನಕ್ಕೆ ತೆರಳುತ್ತಿದ್ದ ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೋಹನ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಇತರ ನಾಲ್ವರು ಯುವಕರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಅಕ್ಕೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವಕನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಗೊಂಡ ಯುವಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದುರ್ಘಟನೆ ಸಂಬಂಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಾಥಮಿಕ ತನಿಖೆ ಪ್ರಕಾರ, ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.

Tags:    

Similar News