'ಮೊಂಥಾ' ಚಂಡಮಾರುತ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಾಧ್ಯತೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ 'ಮೊಂಥಾ' ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು (ಗ್ರಾಮಾಂತರ), ಬೆಂಗಳೂರು (ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಮತ್ತು ವಿಜಯನಗರದಲ್ಲಿ ಹಗುರದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಒಳನಾಡಿನ ಒಟ್ಟು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 29 ರವರೆಗೆ ವ್ಯಾಪಕ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
'ಮೊಂಥಾ' ಚಂಡಮಾರುತವು ಪಶ್ಚಿಮ-ಮಧ್ಯ ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡು, ಉತ್ತರ-ವಾಯುವ್ಯದ ಕಡೆಗೆ ಚಲಿಸುತ್ತಿದೆ. ಈ ಚಂಡಮಾರುತವು ಅಕ್ಟೋಬರ್ 28 ರ ಬೆಳಗಿನ ಜಾವದ ವೇಳೆಗೆ ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದೇ ದಿನ ಸಂಜೆ ಅಥವಾ ರಾತ್ರಿ ವೇಳೆಗೆ ಆಂಧ್ರಪ್ರದೇಶದ ಕರಾವಳಿಯಾದ ಮಚಲಿಪಟ್ಟಣಂ ಮತ್ತು ಕಳಿಂಗಪಟ್ಟಣಂ ನಡುವೆ, ಕಾಕಿನಾಡ ಬಳಿ ನೆಲಕ್ಕೆ ಅಪ್ಪಳಿಸುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಗಾಳಿಯ ವೇಗವು ಗಂಟೆಗೆ 90–100 ಕಿ.ಮೀ.ಗೆ, ಗರಿಷ್ಠ 110 ಕಿ.ಮೀ.ಗೆ ತಲುಪಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.