ಸಚಿವೆ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಬಿಜೆಪಿ ಮುಖಂಡ ಸಿ.ಟಿ. ರವಿ ಬಂಧನ
x

ಸಚಿವೆ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಬಿಜೆಪಿ ಮುಖಂಡ ಸಿ.ಟಿ. ರವಿ ಬಂಧನ

ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 75 ಮತ್ತು 79 ಪ್ರಕಾರ ಸಿ.ಟಿ. ರವಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸೆಕ್ಷನ್‌ಗಳ ಪ್ರಕಾರ ಪೊಲೀಸರು ಆರೋಪಿಯನ್ನು ಯಾವುದೇ ನ್ಯಾಯಾಲಯದ ವಾರಂಟ್‌ ಇಲ್ಲದೆ ಬಂಧಿಸಬಹುದಾಗಿದೆ.


ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಗುರುವಾರ ವಿಧಾನ ಪರಿಷತ್ ನಲ್ಲಿ ಗುರುವಾರ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಹಾಗೂ ಬಿಜೆಪಿಯ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರನ್ನು ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮಾಂತರದ ಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೀಡಿದ್ದ ದೂರಿನ್ವಯ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 75 ಮತ್ತು 79 ಪ್ರಕಾರ ಎಫ್‌ಐಆರ್‌ ದಾಖಲಾಗಿತ್ತು. ಈ ಸೆಕ್ಷನ್‌ಗಳ ಪ್ರಕಾರ ಪೊಲೀಸರು ಆರೋಪಿಯನ್ನು ಯಾವುದೇ ನ್ಯಾಯಾಲಯದ ವಾರಂಟ್‌ ಇಲ್ಲದೆ ಬಂಧಿಸಬಹುದಾಗಿದೆ.

ತಮ್ಮ ಮೇಲೆ ಹಲ್ಲೆ ನಡೆಸಿದ ಆರೋಪ ಮಾಡಿ ಆರೋಪಿಗಳನ್ನು ಬಂಧಿಸಬೇಕೆಂದು ವಿಧಾನಸೌಧ ಎದುರು ಧರಣಿ ಕುಳಿತಿದ್ದ ರವಿ ಅವರನ್ನು ಪೊಲೀಸರು ಸ್ಥಳದಲ್ಲೇ ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ರವಿ ಅವರನ್ನು ಹಾಜರುಪಡಿಸಿ ಪೊಲೀಸ್‌ ವಶಕ್ಕೆ ಅಥವಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಕರಣದ ಹಿನ್ನೆಲೆ

ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಅಂಬೇಡ್ಕರ್ ಕುರಿತು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಬಂಧ ವಿಧಾನ ಪರಿಷತ್ ನಲ್ಲಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಿ.ಟಿ.ರವಿ ಲಕ್ಷ್ಮೀ ಹೆಬ್ಬಾಳಕರ್ ಅವರ ಕುರಿತು ಅವಹೇಳನಕಾರಿ ಪದಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣದ ಸಂಬಂಧ ಕಾಂಗ್ರೆಸ್ ಮುಖಂಡರು ಈಗಾಗಲೇ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೂ ದೂರು ನೀಡಿದ್ದಾರೆ. ಸಿ.ಟಿ.ರವಿ ಅವರನ್ನು ಸದನದಿಂದ ಅಮಾನತುಗೊಳಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಹೆಬ್ಬಾಳ್ಕರ್‌ ಆಗ್ರಹಿಸಿದ್ದಾರೆ.

ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿರುವುದು ಕ್ರಿಮಿನಲ್ ಅಪರಾಧ ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಮನಾದುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬಸವರಾಜ ಹೊರಟ್ಟಿ ಭೇಟಿಯಾದ ಡಿಸಿಎಂ, ಸಚಿವರು

ಸಚಿವರ ವಿರುದ್ಧ ಸಿ.ಟಿ.ರವಿ ಬಳಸಿದ ಪ್ರಕರಣ ನಡೆಯುತ್ತಿದ್ದಂತೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಚಿವ ಹಾಗೂ ಪರಿಷತ್ ನ ಕಾಂಗ್ರೆಸ್ ಸಭಾ ನಾಯಕ ಬೋಸರಾಜು, ಸಚಿವ ರಾದ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ, ಶಿವರಾಜ್ ತಂಡಗಡಿ, ಡಾ.ಶರಣಪ್ರಕಾಶ್ ಪಾಟೀಲ್, ಹಿರಿಯ ಸದಸ್ಯರಾದ ಹರಿಪ್ರಸಾದ್, ನಾಗರಾಜ್ ಯಾದವ್, ಉಮಾಶ್ರೀ, ಶಾಸಕಿಯರಾದ ನಯನ ಮೋಟಮ್ಮ, ರೂಪಾ ಶಶಿಧರ್, ಲತಾ ಮಲ್ಲಿಕಾರ್ಜುನ್, ಅನ್ನಪೂರ್ಣ ತುಕಾರಾಂ ಸೇರಿದಂತೆ ಕಾಂಗ್ರೆಸ್ ಶಾಸಕರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.

Read More
Next Story