ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಹೆರಿಗೆ ಪ್ರಕರಣ; ಪ್ರಾಂಶುಪಾಲೆ ಸೇರಿ ನಾಲ್ವರು ಅಮಾನತು

9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಬುಧವಾರ ಮಧ್ಯಾಹ್ನ ಸುಮಾರು 2.30 ವೇಳೆಗೆ ನೋವು ಕಾಣಿಸಿಕೊಂಡಿದ್ದು, ವಸತಿ ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಳು.;

Update: 2025-08-29 06:52 GMT

ಸರ್ಕಾರಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶೌಚಾಲಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲೆ, ಹಾಸ್ಟೆಲ್ ವಾರ್ಡನ್, ವಿಜ್ಞಾನ ಶಿಕ್ಷಕ ಮತ್ತು ದೈಹಿಕ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. 

ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಬುಧವಾರ ಮಧ್ಯಾಹ್ನ ಸುಮಾರು 2.30 ವೇಳೆಗೆ ನೋವು ಕಾಣಿಸಿಕೊಂಡು ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ್ದಳು. 

ಬಾಲಕಿಯಲ್ಲಿ ಗರ್ಭಿಣಿಯಾಗಿದ್ದರ ಯಾವ ಲಕ್ಷಣಗಳೂ ಇರಲಿಲ್ಲ. ಈಗ ಹೆರಿಗೆಯಾಗಿರುವುದೇ ಅಚ್ಚರಿಯಾಗಿದೆ. ಬಾಲಕಿಗೆ ಮದುವೆ ಮಾಡಿದ್ದಾರೋ, ಇಲ್ಲವೋ ಎಂಬುದು ನಮಗೆ ಗೊತ್ತಿಲ್ಲ. ಪೋಷಕರು ಈ ಬಗ್ಗೆ ಮಾಹಿತಿ ನೀಡಿಲ್ಲ ಎಂದು ವಸತಿ ಶಾಲೆಯ ಪ್ರಾಂಶುಪಾಲ ಬಸಮ್ಮ ತಿಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ನಿರ್ಮಲಾ ಅವರು ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ ನಾಲ್ವರನ್ನು ಅಮಾನತುಗೊಳಿಸಲಾಗಿದೆ. 

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇಂತಹ ಆಘಾತಕಾರಿ ಘಟನೆಯನ್ನು ರಹಸ್ಯವಾಗಿ ಇಟ್ಟಿದ್ದಾರೆ. ನಿಯಮಗಳ ಪ್ರಕಾರ, ಹಾಸ್ಟೆಲ್ ವಿದ್ಯಾರ್ಥಿನಿಯರ ಆರೋಗ್ಯ ಮತ್ತು ಮುಟ್ಟಿನ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಬೇಕು. ಆದರೆ, ಇಲ್ಲಿ ಅಂತಹ ಯಾವುದೇ ಕ್ರಮ ಕೈಗೊಂಡಿಲ್ಲ. ತಾಯಿ ಮತ್ತು ಮಗು ಪ್ರಸ್ತುತ ಆರೋಗ್ಯವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.

ಘಟನೆ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಗೆ ಸೂಚನೆ ನೀಡಿದೆ. ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿಯಿಂದ ದೂರು ಬಂದ ಬಳಿಕ ಎಫ್‌ಐಆರ್ ದಾಖಲಿಸುವಂತೆ ನಾವು ಎಸ್‌ಪಿ ಅವರೊಂದಿಗೆ ಮಾತನಾಡಿದ್ದೇವೆ. ಆಯೋಗವು ಈಗಾಗಲೇ ಶಾಲಾ ಶಿಕ್ಷಕ ವೃಂದದ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಶಾಲಾ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. 

Tags:    

Similar News