ನೆಲಮಂಗಲದಲ್ಲಿ ಹಾಡಹಗಲೇ ಗುಂಡಿನ ದಾಳಿ: ಗ್ರಾ.ಪಂ ಸದಸ್ಯ ಪ್ರಾಣಾಪಾಯದಿಂದ ಪಾರು
ಗುಂಡಿನ ಶಬ್ದ ಕೇಳಿದ ತಕ್ಷಣ ಸ್ಥಳೀಯರು ಮತ್ತು ಕುಟುಂಬಸ್ಥರು ಸ್ಥಳಕ್ಕೆ ದೌಡಾಯಿಸಿ, ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದಲ್ಲಿ ಹಾಡಹಗಲೇ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಇಡೀ ತಾಲೂಕನ್ನು ಬೆಚ್ಚಿಬೀಳಿಸಿದೆ. ಪಟ್ಟಣದ ಇಸ್ಲಾಂಪುರ ನಿವಾಸಿಯಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸಲೀಂ ಅವರ ಮೇಲೆ ಈ ದಾಳಿ ನಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಬೆಳಿಗ್ಗೆ ಸಲೀಂ ಅವರು ತಮ್ಮ ಮನೆಯ ಬಳಿ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಏಕಾಏಕಿ ಅಲ್ಲಿಗೆ ಬಂದ ಅಪರಿಚಿತರು ಅವರ ಮೇಲೆ ಗುಂಡು ಹಾರಿಸಿ, ಕ್ಷಣಾರ್ಧದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಗುಂಡುಗಳು ಸಲೀಂ ಅವರ ಕೈ ಮತ್ತು ಕಾಲಿಗೆ ತಗುಲಿದ್ದು, ಅವರು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದಾರೆ.
ಗುಂಡಿನ ಶಬ್ದ ಕೇಳಿದ ತಕ್ಷಣ ಸ್ಥಳೀಯರು ಮತ್ತು ಕುಟುಂಬಸ್ಥರು ಸ್ಥಳಕ್ಕೆ ದೌಡಾಯಿಸಿ, ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯಕ್ಕೆ ಸಲೀಂ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತನಿಖೆ ಚುರುಕು
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
ದಾಳಿಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ನಡೆದಿದೆಯೇ ಅಥವಾ ವೈಯಕ್ತಿಕ ಕಲಹವೇ ಕಾರಣವೇ ಎಂಬ ಕೋನದಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಲೀಂ ಅವರಿಂದ ಹೇಳಿಕೆ ಪಡೆದ ನಂತರ ತನಿಖೆಗೆ ಮತ್ತಷ್ಟು ಸುಳಿವು ಸಿಗುವ ನಿರೀಕ್ಷೆ ಇದೆ.