40 ಪರ್ಸೆಂಟ್ ಕಮಿಷನ್ ಹಗರಣ; ಎಸ್ಐಟಿ ತನಿಖೆಗೆ ಸಂಪುಟ ನಿರ್ಧಾರ; ಬಿಜೆಪಿಗೆ ಆತಂಕ
ಈ ವಿಶೇಷ ತನಿಖಾದಳದಲ್ಲಿ ತಾಂತ್ರಿಕ ಪರಿಣತರು, ಪೊಲೀಸ್ ಅಧಿಕಾರಿಗಳು ಇರಲಿದ್ದಾರೆ. ಎರಡು ತಿಂಗಳ ಒಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಕಾನೂನು ಸಚಿವ ಎಚ್. ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.;
ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆದಿರುವ ಹಗರಣದ ಕುರಿತು ಎಸ್ಐಟಿ ತನಿಖೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 11ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಬಗ್ಗೆ ಕಾನೂನು ಸಚಿವ ಎಚ್ಕೆ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ 21 ವಿಷಯಗಳ ಕುರಿತು ಚರ್ಚೆಯಾಗಿದ್ದು, ಇದೇ ವೇಳೆ ಕಮಿಷನ್ ಗುತ್ತಿಗೆದಾರರ ಸಂಘ ಮಾಡಿದ್ದ 40 ಪರ್ಸೆಂಟ್ ಕಮಿಷನ್ ಆರೋಪದ ಕುರಿತ ತನಿಖಾ ಆಯೋಗದ ವರದಿಯ ಬಗ್ಗೆಯೂ ಚರ್ಚೆ ನಡೆದಿದೆ. ಅಂತಿಮವಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರವಿದ್ದ ವೇಳೆ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪಗಳ ಬಗ್ಗೆ ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗ ತನಿಖೆ ನಡೆಸಿ ವರದಿ ನೀಡಿತ್ತು. ಅದರಲ್ಲಿ ಹಲವಾರು ಶಿಫಾರಸುಗಳನ್ನು ಮಾಡಲಾಗಿದೆ. 1729 ಕಾಮಗಾರಿಗಳಲ್ಲಿ ಅಕ್ರಮಗಳ ಬಗ್ಗೆ ವಿಚಾರಣೆ ಮಾಡಿದ್ದಾರೆ. ಕಾಮಗಾರಿಗಳಿಗೆ ಬಿಡುಗಡೆಯಾದ ಅನುದಾನ, ಕಾಮಗಾರಿ ಪ್ರಗತಿ, ತಾರತಮ್ಯ, ಟೆಂಡರ್ ಪ್ರೊಸೆಸ್ ಬಗ್ಗೆ ವಿವರಾವಾಗಿ ವರದಿ ನೀಡಿದೆ. ಹೀಗಾಗಿ ಹೆಚ್ಚಿನ ತನಿಖೆಗಾಗಿ ಎಸ್ಐಟಿ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ವಿವರ ನೀಡಿದರು.
ಈ ವಿಶೇಷ ತನಿಖಾದಳದಲ್ಲಿ ತಾಂತ್ರಿಕ ಪರಿಣತರು, ಪೊಲೀಸ್ ಅಧಿಕಾರಿಗಳು ಇರಲಿದ್ದಾರೆ. ಎರಡು ತಿಂಗಳ ಒಳಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.