ಎರಡನೇ ದಿನವೂ ಸಚಿವರು, ಶಾಸಕರೊಂದಿಗೆ ಸಿಎಂ ಸಭೆ

ಅನೇಕ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಹಣ ನೀಡುತ್ತಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು.;

Update: 2025-07-30 06:27 GMT

ಮುಖ್ಯಮಂತ್ರಿ ಸಿದ್ದರಾಮಯ್ಯ 

ರಾಜ್ಯದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಮತ್ತು ಅನುದಾನ ಬಳಕೆ ಕುರಿತು ಸಚಿವರು ಮತ್ತು ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ದಿನವೂ ಪ್ರಗತಿ ಪರಿಶೀಲನಾ ಸಭೆ ಮುಂದುವರಿಸಿದ್ದಾರೆ.

ಬುಧವಾರ ಸಿ.ಎಂ ಸಿದ್ದರಾಮಯ್ಯ ಅವರು 10 ಜಿಲ್ಲೆಗಳ ಉಸ್ತುವಾರಿಗಳು, ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸಿ, ಕ್ಷೇತ್ರದ ಪ್ರಗತಿ ಮತ್ತು ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲಿದ್ದಾರೆ.

ಸಭೆಯಲ್ಲಿ ಚರ್ಚೆಯಾಗುವ ಜಿಲ್ಲೆಗಳು

ಇಂದು ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ ಅಭಿಪ್ರಾಯ ಪಡೆದುಕೊಳ್ಳಲಿದ್ದಾರೆ. ಈ ಸಭೆಯಲ್ಲಿ ಜಿಲ್ಲೆಯ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಳ್ಳುವ ನಿರೀಕ್ಷೆಯಿದೆ.

ಈ ಸಭೆಯಲ್ಲಿ ಕ್ಷೇತ್ರವಾರು ಬಿಡುಗಡೆಯಾಗಿರುವ ಅನುದಾನ, ಇಲಾಖಾವಾರು ಅನುದಾನದ ಬಳಕೆ, ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಜಾರಿಯ ಸ್ಥಿತಿಗತಿ, ಸಚಿವರು ಮತ್ತು ಶಾಸಕರ ನಡುವೆ ಸಮನ್ವಯತೆ ಕುರಿತಂತೆಯೂ ಚರ್ಚೆ ನಡೆಯಲಿದೆ.  ಜಿಲ್ಲೆಯಲ್ಲಿನ ಅಭಿವೃದ್ಧಿ ಕೆಲಸಗಳ ಸ್ಥಿತಿಗತಿ, ಕೃಷಿ ಚಟುವಟಿಕೆಗಳ ಪ್ರಗತಿ, ಬಿಡುಗಡೆಯಾಗಿರುವ ಅನುದಾನದಲ್ಲಿ ವೆಚ್ಚವಾಗಿರುವ ಹಣದ ಪ್ರಮಾಣ, ಕಾಮಗಾರಿ ಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸುವ ಸಂಬಂಧವೂ ಚರ್ಚೆ ನಡೆಯಲಿದೆ ಎನ್ನಲಾಗಿದೆ. 

ಮಂಗಳವಾರ ಶಾಸಕರೊಂದಿಗೆ ಸಭೆ

ಸಿಎಂ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರು, ಚಾಮರಾಜನಗರ, ತುಮಕೂರು, ಕೊಡಗು, ಹಾಸನ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರು ಮತ್ತು ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದ್ದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರತಿ ಜಿಲ್ಲೆಗೆ ಅರ್ಧಗಂಟೆಗಳ ಸಮಯ ನಿಗದಿ ಮಾಡಿ ಸಮಸ್ಯೆಗಳನ್ನು ಆಲಿಸಿದ್ದರು. ಸಚಿವರು, ಶಾಸಕರು ಸಮನ್ವಯತೆಯಿಂದ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದ್ದರು.  

ಶಾಸಕರ ಅಸಮಾಧಾನಕ್ಕೆ ಕಾರಣಗಳೇನು?

ಅನೇಕ ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರ ಹಣ ನೀಡುತ್ತಿಲ್ಲ ಎಂದು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜು ಕಾಗೆ ಸೇರಿದಂತೆ ಹಲವರು ಶಾಸಕರು ಅನುದಾನ ಲಭ್ಯವಾಗದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದ್ದರು. ನಿಧಿಯ ಕೊರತೆಯಿಂದಾಗಿ ಶಾಸಕರು ತಮ್ಮ ಕ್ಷೇತ್ರಗಳಲ್ಲಿ ರಸ್ತೆ, ಕುಡಿಯುವ ನೀರು, ಶಾಲಾ ಕಟ್ಟಡಗಳಂತಹ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದ್ದರು.

ಶಾಸಕರು, ಸಚಿವರ ಅಸಮಧಾನದ ಬೆನ್ನಲ್ಲೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿ ರಂದೀಪ್ ಸುರ್ಜೇವಾಲಾ ರಾಜ್ಯಕ್ಕೆ ಭೇಟಿ ನೀಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಹಿರಿಯ ಸಚಿವರೊಂದಿಗೆ ಸಭೆ ನಡೆಸಿದ್ದರು. ಇದರೊಂದಿಗೆ ಅಸಮಾಧಾನಗೊಂಡಿದ್ದ ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿ ಅವರ ದೂರುಗಳನ್ನು ಆಲಿಸಿದ್ದರು. 

Tags:    

Similar News