ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ: ಕಾಂಗ್ರೆಸ್ ಹಿರಿಯ ಮುಖಂಡ ಕೆ.ಬಿ.ಕೋಳಿವಾಡ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ.;

Update: 2024-09-26 12:10 GMT
ಕೆ.ಬಿ.ಕೋಳಿವಾಡ
Click the Play button to listen to article

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು ಕಾಂಗ್ರೆಸ್‌ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದ್ದಾರೆ. 

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದು ಉತ್ತಮ. ತನಿಖೆ ಮುಗಿಯುವ ತನಕ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ತನಿಖೆಯಲ್ಲಿ ಆರೋಪ ಮುಕ್ತರಾದರೆ ಬಳಿಕ ಅವರು ಮತ್ತೆ ಸಿಎಂ ಆಗಿ ಮುಂದುವರಿಯಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. 

ಪಕ್ಷಕ್ಕಾಗುವ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ಸದ್ಯ ರಾಜೀನಾಮೆ ನೀಡುವುದು ಸೂಕ್ತ. ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲೂ ಸಹ ಸಿಎಂ ವಿಚಾರ ಪ್ರಸ್ತಾಪಿಸಿ ಪ್ರತಿಪಕ್ಷಗಳು ರಾಜೀನಾಮೆ ವಿಚಾರ ಬಗ್ಗೆ ಮಾತನಾಡುತ್ತಿವೆ. ಪ್ರಧಾನಿ ಮೋದಿ ಹರಿಯಾಣ ರಾಜ್ಯದಲ್ಲಿ ಚುನಾವಣಾ ಪ್ರಚಾರ ವೇಳೆ ಈ ವಿಚಾರ ಪ್ರಸ್ತಾಪಿಸುತ್ತಿದ್ದಾರೆ. ಅದರಿಂದ ಪಕ್ಷಕ್ಕೆ ಮುಜುಗರ ಉಂಟಾಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ಒಳಿತು ಎಂದು ಸಲಹೆ ನೀಡಿದರು.

40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಕಪ್ಪುಚುಕ್ಕೆ ಇಲ್ಲದ್ದಂತೆ ಕಳಂಕರಹಿತರಾಗಿದ್ದಾರೆ. ಹೈಕಮಾಂಡ್‌ ಸೇರಿದಂತೆ 136 ಶಾಸಕರ ಸಂಪೂರ್ಣ ಬೆಂಬಲವೂ ಇದೆ. ಅವರು ನಿರ್ದೋಷಿ ಎಂಬುದರಲ್ಲಿ ಎರಡು ಮಾತಿಲ್ಲ. ಜೆಡಿಎಸ್‌‍, ಬಿಜೆಪಿಯವರ ರಾಜಕೀಯ ಪಿತೂರಿಯಿಂದಾಗಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ವ್ಯಕ್ತಿಗಳಿಂದ ದೂರು ಕೊಡಿಸಿದ್ದಾರೆ. ವಿಚಾರಣೆ ನಡೆದ ಬಳಿಕ ಅವರು ನಿರ್ದೋಷಿಯಾಗಿ ಹೊರಬರುತ್ತಾರೆಂಬ ವಿಶ್ವಾಸ ತಮಗಿದೆ ಎಂದರು.

ನನಗೂ ಸಿಎಂಗೂ ಹಿಂದೆ ಭಿನ್ನಾಭಿಪ್ರಾಯ ಇದ್ದರೂ ಈಗ ಆತ್ಮೀಯರಾಗಿದ್ದೇವೆ. ನನ್ನ ಜೊತೆ ಬೇರೆ ಯಾವ ನಾಯಕರೂ ಇಲ್ಲ. ಇದು ನನ್ನ ವೈಯುಕ್ತಿಕ ಅಭಿಪ್ರಾಯ. ಸಿದ್ದರಾಮಯ್ಯ ರಾಜೀನಾಮೆ ಕೊಡದಿದ್ದರೆ, ರಾಜೀನಾಮೆ ಕೇಳುವುದು ಹೈಕಮಾಂಡ್‌ಗೆ ಬಿಟ್ಟಿದ್ದು. ಸದ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಿ ಆ ಬಳಿಕ ತಪ್ಪಿಲ್ಲ ಅಂದರೆ ಅವರೆ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಸಲಹೆ ನೀಡಿದರು.

Tags:    

Similar News