ಸರ್ಕಾರಿ ಶಾಲೆ, ಮುಜರಾಯಿ ದೇವಸ್ಥಾನ, ಮೈದಾನಗಳಲ್ಲಿ ಆರ್‌ಎಸ್‌ಎಸ್‌ ಕವಾಯತು ಬ್ಯಾನ್‌: ಸರ್ಕಾರ ಪರಿಶೀಲನೆ

ಪೊಲೀಸ್‌ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದುಕೊಂಡು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಕನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ," ಎಂದು ಪ್ರಿಯಾಂಕ್‌ ಖರ್ಗೆ ಒತ್ತಿ ಹೇಳಿದ್ದಾರೆ.

Update: 2025-10-12 11:47 GMT

ಶಾಲೆಗಳು, ಮೈದಾನಗಳು, ಮುಜರಾಯಿ ಇಲಾಖೆ ದೇವಸ್ಥಾನ ಅಥವಾ ಯಾವುದೇ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ ಎಸ್ ಎಸ್) ಸಂಘಟನೆಯು ಶಾಖೆ, ಸಾಂಘಿಕ್‌ ಅಥವಾ ಬೈಠಕ್‌ಗಳ ಹೆಸರಿನಲ್ಲಿ ಯಾವುದೇ ಚಟುವಟಿಕೆ ನಡೆಸುವ ಬಗ್ಗೆ ನಿಷೇಧ ಹೇರುವ ಬಗ್ಗೆ ಸರ್ಕಾರ ಸಜ್ಜಾಗಿದೆ. ಈ  ಸಂಬಂಧ ಮುಖ್ಯಮಂತ್ರಿಗಳ ಕಾರ್ಯಾಲಯ ಪರಿಶೀಲನೆ ನಡೆಸುತ್ತಿದೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನಡಾವಳಿಯೊಂದನ್ನು ಕಳುಹಿಸಿದ್ದಾರೆ.ಈ ಬಗ್ಗೆ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ಜರುಗಿಸಲು ಸಿದ್ದರಾಮಯ್ಯ ತಮ್ಮ ಕಾರ್ಯದರ್ಶಿಗೆ ಮುಚ್ಚಳಿಕೆ ಬರೆದು ಸೂಚಿಸಿದ್ದಾರೆ.

ಪ್ರಿಯಾಂಕ ಖರ್ಗೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವೊಂದನ್ನು ಬರೆದಿದ್ದು, "ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುದಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನ ನಮಗೆ ಅಧಿಕಾರ ನೀಡುತ್ತದೆ," ಎಂದು ವಿವರಿಸಿದ್ದಾರೆ.

"ರಾಷ್ಟ್ರೀಯ ಸ್ವಯಂಸೇವಕ ಸಂಘ ಎಂಬ ಹೆಸರಿನ ಸಂಘಟನೆಯು ಸರ್ಕಾರಿ ಮತ್ತು ಅನುದಾನಿತ ಶಾಲೆಗಳು, ಸಾರ್ವಜನಿಕ ಸರ್ಕಾರಿ ಮೈದಾನಗಳನ್ನು ಬಳಸಿಕೊಂಡು ಶಾಖೆ ನಡೆಸುತ್ತಾ, ಘೋಷಣೆಗಳನ್ನು ಕೂಗುತ್ತಾ, ಮಕ್ಕಳು ಮತ್ತು ಯುವ ಸಮುದಾಯದ ಮನಸ್ಸಿನಲ್ಲಿ ಭಾರತದ ಏಕತೆಯ ವಿರುದ್ಧವಾಗಿ ಹಾಗೂ ಸಂವಿಧಾನದ ಆಶಯಗಳಿ ವಿರುದ್ಧವಾಗಿ ನಕಾರಾತ್ಮಕ ಆಲೋಚನೆಗಳನ್ನು ತುಂಬಲಾಗುತ್ತಿದೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

"ಪೊಲೀಸ್‌ ಅನುಮತಿ ಪಡೆಯದೆ ದೊಣ್ಣೆಗಳನ್ನು ಹಿಡಿದುಕೊಂಡು ಆಕ್ರಮಣಕಾರಿ ಪ್ರದರ್ಶನ ನಡೆಸುವ ಮೂಲಕ ಮುಗ್ಧ ಮಕ್ಕಳು ಹಾಗೂ ಯುವಕನರ ಮನಸಿನ ಮೇಲೆ ದುಷ್ಪರಿಣಾಮ ಬೀರಲಾಗುತ್ತಿದೆ," ಎಂದು ಪ್ರಿಯಾಂಕ್‌ ಖರ್ಗೆ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.

" ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು, ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಸಂಘಟನೆಯ ಶಾಖೆ, ಸಾಂಘಿಕ್ ಅಥವಾ ಬೈಠಕ್‌ ಹೆಸರಲ್ಲಿ ನಡೆಯುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು," ಎಂದು ಖರ್ಗೆ ಸಿದ್ದರಾಮಯ್ಯರನ್ನು ಕೇಳಿಕೊಂಡಿದ್ದಾರೆ.

ಸರ್ಕಾರದ ಉತ್ತರ

ಈ ಹಿಂದೆ ಗೃಹಮಂತ್ರಿ ಪರಮೇಶ್ವರ್‌ ಅವರು ವಿಧಾನಪರಿಷತ್ತಿನಲ್ಲಿ ಲಿಖಿತ ಪ್ರಶ್ನೆಯೊಂದಕ್ಕೆ ಉತ್ತರಿಸಿ "ನೋಂದಾಯಿತವಲ್ಲದ ಸಂಸ್ಥೆಗಳ ಪಟ್ಟಿಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘವು ರಾಜ್ಯದಲ್ಲಿ (ಆರ್‍‌ಎಸ್‌ಎಸ್‌) ನೂರಾರು ಸಭೆ ಸಮಾರಂಭ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿಯೆ?" ಎಂಬ ಪ್ರಶ್ನೆಗೆ "ಬಂದಿದೆʼ ಎಂದು ಉತ್ತರಿಸಿದ್ದರು.

ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಿದ್ದರು. ಜತೆಗೆ, ಆರ್‌ಎಸ್‌ಎಸ್‌ನ ರಾಷ್ಟ್ರೋತ್ಥಾನ ಮತ್ತು ಯಾದವ ಸ್ಮೃತಿ ಕಟ್ಟಡಗಳ ಭದ್ರತೆ ದೃಷ್ಟಿಯಿಂದ ಬೆಂಗಳೂರು ನಗರದ ಸಿಎಆರ್ (ಕೇಂದ್ರ) ಘಟಕದಿಂದ ರಕ್ಷಣೆ ಒದಗಿಸಲಾಗಿದೆ ಎಂಬುದನ್ನೂ ಸರ್ಕಾರ ಒಪ್ಪಿಕೊಂಡಿತ್ತು.

ಸರ್ಕಾರದ ಉತ್ತರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿತ್ತು. ಯಾವಾಗಲೂ ಆರ್‌ಎಸ್‌ಎಸ್‌ ಬಗ್ಗೆ ಟೀಕಾಸ್ತ್ರ ಎಸೆಯುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಏನು ಹೇಳುತ್ತಾರೆ ಎಂಬ ಪ್ರಶ್ನೆಯನ್ನು ಸಾರ್ವಜನಿಕರು ಕೇಳುತ್ತಿದ್ದರು.

ಇತ್ತೀಚೆಗೆ ನಡೆದ ವಿಧಾನಸಭೆ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ,"ನಮಸ್ತೇ ಸದಾ ವತ್ಸಲೇ.." ಹಾಡುವ ಮೂಲಕ ವಿವಾದ ಸೃಷ್ಟಿಸಿದ್ದರು. ಆ ಬಗ್ಗೆ ಕಾಂಗ್ರೆಸ್‌ ನಾಯಕರು ಖಂಡಿಸಿದ್ದರು ಮತ್ತು ವಿಧಾನ ಪರಿಷತ್‌ ಹಿರಿಯ ಮುಖಂಡ ಬಿ.ಕೆ. ಹರಿಪ್ರಸಾದ್‌ ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಡಿ.ಕೆ. ಶಿವಕುಮಾರ್‌ ಅವರನ್ನು ಆಗ್ರಹಿಸಿದ್ದರು. ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯಪ್ರವೇಶಿದ ಬಳಿಕ ಡಿ.ಕೆ. ಶಿವಕುಮಾರ್‌ ಅವರು ಮಾಧ್ಯಮದ ಮುಂದೆ ಕ್ಷಮೆ ಕೇಳಿ ಪರಿಸ್ಥಿತಿ ತಿಳಿಗೊಳಿಸಿದ್ದರು.

ಆದರೆ, ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ಸರ್ಕಾರಿ ಶಾಲೆ, ಮೈದಾನ ಅಥವಾ ಮುಜರಾಯಿ ದೇವಸ್ಥಾನಗಳಲ್ಲಿ ನಿಷೇಧಿಸಬೇಕೆಂಬ ಪ್ರಿಯಾಂಕ ಖರ್ಗೆಯವರ ಪತ್ರ ಈಗ ಚರ್ಚೆಗೆ ಕಾರಣವಾಗಿದೆ. ಆರ್‌ಎಸ್ಎಸ್‌ ಹಾಗೂ ವಿರೋಧ ಪಕ್ಷ ಬಿಜೆಪಿ ಈ ಬಗ್ಗೆ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದನ್ನು ಮುಂದಿನ ದಿನಗಳಲ್ಲಿ ಗಮನಿಸಿಬೇಕಿದೆ.

Tags:    

Similar News