ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ?; ಮಹತ್ವ ಪಡೆದ ಬಿ.ಕೆ. ಹರಿಪ್ರಸಾದ್ ಹೇಳಿಕೆ

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಹರಿಪ್ರಸಾದ್ ಅವರು , "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಪಕ್ಷವನ್ನು ಮುನ್ನಡೆಸಲು ಯಾರಾದರೂ ಒಬ್ಬರು ಉತ್ತರಾಧಿಕಾರಿ ಬೇಕೇ ಬೇಕಲ್ಲವೇ? ಎಂದರು.

Update: 2025-12-08 06:22 GMT

ಸಿಎಂ ಸಿದ್ದರಾಮಯ್ಯ, ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌

Click the Play button to listen to article

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆಗೆ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಪರೋಕ್ಷವಾಗಿ ಉತ್ತರ ನೀಡಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರ ಪರವಾಗಿ ಬಹಿರಂಗವಾಗಿಯೇ ಬ್ಯಾಟಿಂಗ್ ಬೀಸಿರುವ ಅವರು, "ಸಿದ್ದರಾಮಯ್ಯ ಅವರ ನಂತರ ಸತೀಶ್ ಜಾರಕಿಹೊಳಿ ಅವರು ಉತ್ತರಾಧಿಕಾರಿಯಾದರೆ ನನಗೆ ಬಹಳ ಸಂತೋಷ," ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ನಾಯಕತ್ವದ ಗುಣಗಳನ್ನು ಕೊಂಡಾಡಿದ ಹರಿಪ್ರಸಾದ್, "ಸತೀಶ್ ಜಾರಕಿಹೊಳಿ ಅವರು ಸದಾ ಅಹಿಂದ (ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರು) ವರ್ಗಗಳ ಪರವಾಗಿ ದನಿ ಎತ್ತುತ್ತಾ ಬಂದಿದ್ದಾರೆ. ಸಮಾಜದ ದುರ್ಬಲ ವರ್ಗಗಳ ಬಗ್ಗೆ ಅವರಿಗೆ ವಿಶೇಷ ಕಾಳಜಿ ಇದೆ. ಇಂತಹ ನಾಯಕರು ರಾಜ್ಯಕ್ಕೆ ಅಗತ್ಯ," ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಸಿದ್ದರಾಮಯ್ಯ ನಂತರ ಯಾರಾದರೂ ಬೇಕಲ್ಲವೇ?’

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಂತರ ಪಕ್ಷವನ್ನು ಮುನ್ನಡೆಸಲು ಯಾರಾದರೂ ಒಬ್ಬರು ಉತ್ತರಾಧಿಕಾರಿ ಬೇಕೇ ಬೇಕಲ್ಲವೇ? ಆ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಸೂಕ್ತ ವ್ಯಕ್ತಿ ಎನಿಸಿದರೆ ಅದರಲ್ಲಿ ತಪ್ಪೇನಿದೆ?" ಎಂದು ಮರುಪ್ರಶ್ನೆ ಹಾಕಿದ್ದಾರೆ. ಈ ಮೂಲಕ ಮುಂದಿನ ಸಿಎಂ ರೇಸ್‌ನಲ್ಲಿ ಸತೀಶ್ ಜಾರಕಿಹೊಳಿ ಹೆಸರು ಮುಂಚೂಣಿಯಲ್ಲಿದೆ ಎಂಬ ಸುಳಿವು ನೀಡಿದ್ದಾರೆ.

ನಾಯಕತ್ವ ಬದಲಾವಣೆ ಚರ್ಚೆಗೆ ತುಪ್ಪ?

ಈಗಾಗಲೇ ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಮತ್ತು ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಬಗ್ಗೆ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಹರಿಪ್ರಸಾದ್ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಸತೀಶ್ ಜಾರಕಿಹೊಳಿ ಅವರು ಕೂಡ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದರು ಎಂಬುದು ಇಲ್ಲಿ ಉಲ್ಲೇಖಾರ್ಹ.

ಒಟ್ಟಿನಲ್ಲಿ, ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಹರಿಪ್ರಸಾದ್ ಅವರೇ ಈಗ ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿರುವುದು ರಾಜಕೀಯ ಲೆಕ್ಕಾಚಾರಗಳನ್ನು ತಲೆಕೆಳಗು ಮಾಡುವ ಸಾಧ್ಯತೆಯಿದೆ.

Tags:    

Similar News