Mining Lease Case | ಎಚ್‌.ಡಿ.ಕುಮಾರಸ್ವಾಮಿ ಜಾಮೀನು ರದ್ದತಿ ಕೋರಿ ಎಸ್‌ಐಟಿ ಅರ್ಜಿ

ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್‌ಎಸ್‌ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ.;

Update: 2024-10-22 07:50 GMT
ಹೆಚ್‌ ಡಿ ಕುಮಾರಸ್ವಾಮಿ
Click the Play button to listen to article

ಅಕ್ರಮ ಗಣಿಗಾರಿಕೆ ಪ್ರಕರಣಗಳ ತನಿಖೆ ನಡೆಸುತ್ತಿರುವ ಕರ್ನಾಟಕ ಲೋಕಾಯುಕ್ತ ಎಸ್‌ಐಟಿ, ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ ಗಣಿ ಗುತ್ತಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌ಡಿ ಕುಮಾರಸ್ವಾಮಿ ಅವರಿಗೆ ನೀಡಿದ್ದ ಜಾಮೀನು ರದ್ದುಗೊಳಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಅರ್ಜಿ ಸಲ್ಲಿಸಿದೆ.

ಕುಮಾರಸ್ವಾಮಿ ಅವರು 2007ರಲ್ಲಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಎಸ್‌ಎಸ್‌ವಿಎಂ ಕಂಪನಿಗೆ ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ ಆರೋಪವಿದೆ. 2011ರಲ್ಲಿ ಲೋಕಾಯುಕ್ತರಾಗಿದ್ದ ಎನ್. ಸಂತೋಷ್ ಹೆಗ್ಡೆ ಅವರು ಅಕ್ರಮ ಗಣಿಗಾರಿಕೆ ಕುರಿತು ಸಲ್ಲಿಸಿದ್ದ ವರದಿಯಲ್ಲಿನ ಉಲ್ಲೇಖ ಆಧರಿಸಿ ಲೋಕಾಯುಕ್ತದ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಕುಮಾರಸ್ವಾಮಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. 2015ರ ಆಗಸ್ಟ್‌ನಲ್ಲಿ ಕುಮಾರಸ್ವಾಮಿ ಅವರು ವಿಚಾರಣೆಗೆ ಹಾಜರಾಗಿದ್ದ ಸಂದರ್ಭದಲ್ಲಿ ಎಸ್‌ಐಟಿ ಅಧಿಕಾರಿಗಳು ಅವರನ್ನು ಬಂಧಿಸಿ, ನ್ಯಾಯಾಲಯದ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದರು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 3, 2015 ರಂದು ಕುಮಾರಸ್ವಾಮಿ ಅವರಿಗೆ ಅವರಿಗೆ ನೀಡಲಾಗಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ವಿನಂತಿಸಿ, ಸೋಮವಾರ ಹಾಲಿ ಮತ್ತು ಮಾಜಿ ಶಾಸಕರು/ಸಂಸದರ ವಿರುದ್ಧದ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದಾರೆ. ತನಿಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿರುವುದು ಮತ್ತು ತನಿಖಾಧಿಕಾರಿಗಳ ಮೇಲೆ ಒತ್ತಡ ಹೇರಲು ಪ್ರಯತ್ನ ಹಾಗೂ ಬೆದರಿಕೆ ಹಾಕುತ್ತಿರುವ ಆರೋಪಗಳ ಅಡಿಯಲ್ಲಿ ಕುಮಾರಸ್ವಾಮಿ ಅವರ ಜಾಮೀನು ರದ್ದುಗೊಳಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ. 

ಈ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿಗಳು, ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ರಾಜ್ಯಪಾಲರ ಅನುಮತಿ ಕೋರಿದ್ದಾರೆ. ರಾಜ್ಯಪಾಲರ ಕಚೇರಿಯು ಕೆಲವು ಸ್ಪಷ್ಟನೆಗಳನ್ನು ಕೋರಿತ್ತು. ಪುನಃ ಪ್ರಸ್ತಾವವನ್ನು ಸಲ್ಲಿಸಿರುವ ಎಸ್‌ಐಟಿ ಅಧಿಕಾರಿಗಳು, ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿದ್ದರು.

Tags:    

Similar News