Mysore MUDA Case | ಸಿಬಿಐ ತನಿಖೆ: ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸದಿರಲು ಸ್ನೇಹಮಯಿ ಕೃಷ್ಣ ನಿರ್ಧಾರ
ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದರಿಂದ ಪ್ರಕರಣದ ವಿಚಾರಣೆ ಇನ್ನಷ್ಟು ದಿನ ವಿಳಂಬವಾಗಲಿದೆ. ಹಾಗಾಗಿ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತುಪಡಿಸಿ, ಶಿಕ್ಷೆ ಕೊಡಿಸಲು ಖುದ್ದಾಗಿ ವಾದ ಮಂಡನೆ ಮಾಡಲು ನಿರ್ಧರಿಸಿದ್ದೇನೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.;
ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರಾಕರಿಸಿದ ಹೈಕೋರ್ಟ್ ತೀರ್ಪು ಪ್ರಶ್ನಿಸದಿರಲು ದೂರುದಾರ ಸ್ನೇಹಮಯಿ ಕೃಷ್ಣ ನಿರ್ಧರಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುವುದರಿಂದ ಪ್ರಕರಣದ ವಿಚಾರಣೆ ಇನ್ನಷ್ಟು ದಿನ ವಿಳಂಬವಾಗಲಿದೆ. ಹಾಗಾಗಿ ನ್ಯಾಯಾಲಯದಲ್ಲಿ ನಾನು ಮಾಡಿರುವ ಆರೋಪವನ್ನು ಸಾಬೀತುಪಡಿಸಿ, ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಖುದ್ದಾಗಿ ನಾನೇ ವಾದ ಮಂಡನೆ ಮಾಡಲು ನಿರ್ಧರಿಸಿದ್ದೇನೆ. ಅಗತ್ಯ ಬಿದ್ದರೆ ವಕೀಲರನ್ನು ನೇಮಿಸಿಕೊಳ್ಳುವ ಹಕ್ಕು ಉಳಿಸಿಕೊಂಡು ನ್ಯಾಯಾಲಯಕ್ಕೆ ಸಾಕ್ಷ್ಯ ಒದಗಿಸಲಿದ್ದೇನೆ ಎಂದು ದ ಫೆಡರಲ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
ಮುಡಾ ಪ್ರಕರಣ ಕುರಿತ ನನ್ನ ಅರ್ಜಿಗೆ ಹೈಕೋರ್ಟ್ ನೀಡಿರುವ ತೀರ್ಪಿನ ಅಂಶಗಳನ್ನು ಓದಿದ ನಂತರ ಎರಡು ದಿನಗಳ ಕಾಲ ಚಿಂತನೆ ನಡೆಸಿ, ನನ್ನ ಬಳಿ ಇರುವ ಸಾಕ್ಷ್ಯಾಧಾರಗಳನ್ನು ಮತ್ತೊಮ್ಮೆ ಪರಿಶೀಲನೆ ನಡೆಸಿದ್ದೇನೆ. ನನ್ನ ಕೆಲವು ಆತ್ಮೀಯ ವಕೀಲರು, ಹಿತೈಷಿಗಳೊಂದಿಗೆ ಚರ್ಚೆ ನಡೆಸಿ, ನನ್ನ ಇದುವರೆಗಿನ ಕಾನೂನು ಹೋರಾಟದ ಅನುಭವವನ್ನು ಆಧರಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ತಿಳಿಸಿದ್ದಾರೆ.
ಪ್ರಕರಣದ ಅಂತಿಮ ತನಿಖಾ ವರದಿಯನ್ನು ಲೋಕಾಯುಕ್ತ ಪೊಲೀಸರು ಫೆ. 28ರಂದು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ. ಆ ಬಳಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ನ್ಯಾಯಾಲಯಕ್ಕೆ ಅಗತ್ಯ ದಾಖಲೆಗಳನ್ನು ಒದಗಿಸುವ ಜೊತೆಗೆ ವಕೀಲರ ನೆರವಿನಿಂದ ವಾದ ಮಂಡನೆ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.