ಸೇನೆಯ ಹೆಸರಲ್ಲಿ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ: ಸಚಿವ ರಾಮಲಿಂಗಾರೆಡ್ಡಿ
ದೇವರು ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ದೇವಾಲಯಗಳಿಗೂ ಮುಜರಾಯಿ ಇಲಾಖೆ ಆಯುಕ್ತರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.;
ಭಾರತವು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ 'ಆಪರೇಷನ್ ಸಿಂಧೂರ್' ಹೆಸರಿನಲ್ಲಿ ಸೇನಾ ಕಾರ್ಯಾಚರಣೆ ನಡೆಸಿ ನೂರಾರು ಉಗ್ರರನ್ನು ಮಟ್ಟಹಾಕಿದೆ. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖಾ ವ್ಯಾಪ್ತಿಯ ಎಲ್ಲಾ ದೇವಾಲಯಗಳಲ್ಲಿ, ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶಿಸಿದ್ದಾರೆ.
ಭಾರತೀಯ ಸೇನಾ ಕಾರ್ಯಾಚರಣೆಗೆ ಶುಭಾಶಯ ತಿಳಿಸಿದ ಸಚಿವರು, ಭಾರತೀಯ ಸೇನೆಗೆ ಮತ್ತಷ್ಟು ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುವಂತೆ ಎಲ್ಲಾ ದೇವಾಲಯಗಳಿಗೂ ಸೂಚನೆ ನೀಡಲು ಮುಜರಾಯಿ ಇಲಾಖೆ ಆಯುಕ್ತರಿಗೆ ತಿಳಿಸಿದ್ದಾರೆ.
ಸೇನಾಪಡೆಗಳು ಬುಧವಾರ ಮುಂಜಾನೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಭಯೋತ್ಪಾದಕರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದವು. ಈ ಯಶಸ್ವಿ ಸೇನಾ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ದೇಶದ್ಯಾಂತ ನಾಗರಿಕರು ಸಂಭ್ರಮ ವ್ಯಕ್ತಪಡಿಸಿ ಸೇನೆಯ ಪರಾಕ್ರಮವನ್ನು ಕೊಂಡಾಡಿದ್ದಾರೆ. ಅದೇ ರೀತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೂ ರಾಜ್ಯದಲ್ಲಿನ ಎಲ್ಲಾ ದೇವಾಲಯಗಳಲ್ಲಿ ಪಕ್ಷದ ವತಿಯಿಂದ ಸೇನೆಯ ಹೆಸರಲ್ಲಿ ಪೂಜೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ರಾಜಕೀಯ ನಾಯಕರಿಂದ ಸಂದೇಶ
'ಆಪರೇಷನ್ ಸಿಂಧೂರ್' ಯಶಸ್ವಿಯಾದ ಬೆನ್ನಲ್ಲೇ ದೇಶದೆಲ್ಲೆಡೆ ಸೇನೆಯ ಕುರಿತು ಮೆಚ್ಚುಗೆ ವ್ಯಕ್ತಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ವಿಜಯಪುರ ಶಾಸಕ ಬಸವನಗೌಡ ಯತ್ನಾಳ್, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು 'ಎಕ್ಸ್' ಖಾತೆಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.