ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ಇಂದು | ಅಧ್ಯಕ್ಷ ಸ್ಥಾನಕ್ಕೆ ತೀವ್ರ ಪೈಫೋಟಿ
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗೆ ಹಾಲಿ ಅಧ್ಯಕ್ಷ ಸಿ ಎಸ್ ಷಡಕ್ಷರಿ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಿಪಿ ಮಂಜೇಗೌಡ ಅವರ ಸೋದರ ಬಿಪಿ ಕೃಷ್ಣೆಗೌಡ ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ ಸ್ಥಾನಗಳಿಗೆ ಇಂದು (ಡಿ.27) ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ. ಸಂಜೆ ವೇಳೆಗೆ ಫಲಿತಾಂಶವೂ ಹೊರಬೀಳಲಿದೆ.
ನಗರದ ಕಬ್ಬನ್ ಉದ್ಯಾನದಲ್ಲಿರುವ ಸಂಘದ ಕಚೇರಿ ಆವರಣದಲ್ಲಿ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ 971 ಪ್ರತಿನಿಧಿಗಳು ಅಧ್ಯಕ್ಷ ಹಾಗೂ ಖಜಾಂಚಿ ಆಯ್ಕೆಗೆ ಮತ ಚಲಾಯಿಸಲಿದ್ದಾರೆ.
2024–2029ನೇ ಅವಧಿಯ ಸಂಘದ ವಿವಿಧ ಪದಾಧಿಕಾರಿ ಸ್ಥಾನಗಳಿಗೆ ಸೆ. 17 ರಿಂದ ಚುನಾವಣಾ ಪ್ರಕ್ರಿಯೆ ಆರಂಭವಾಗಿತ್ತು. ಮೊದಲ ಹಂತದಲ್ಲಿ ಮೂರು ಶೈಕ್ಷಣಿಕ ಜಿಲ್ಲೆ ಒಳಗೊಂಡಂತೆ 33 ಜಿಲ್ಲೆಗಳು ಹಾಗೂ 191 ತಾಲ್ಲೂಕುಗಳ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆದು, ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿತ್ತು. ರಾಜ್ಯ ಪರಿಷತ್‌ನ 102 ಸ್ಥಾನಗಳಿಗೂ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿತ್ತು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗೆ ಹಾಲಿ ಅಧ್ಯಕ್ಷ ಸಿ ಎಸ್ ಷಡಕ್ಷರಿ ಹಾಗೂ ಸಂಘದ ಮಾಜಿ ಅಧ್ಯಕ್ಷ ಬಿಪಿ ಮಂಜೇಗೌಡ ಅವರ ಸೋದರ ಬಿಪಿ ಕೃಷ್ಣೆಗೌಡ ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಷಡಕ್ಷರಿ ಬಣದಲ್ಲಿ ಅಧ್ಯಕ್ಷ ಹುದ್ದೆಗೆ ಸಿ. ಎಸ್. ಷಡಾಕ್ಷರಿ ಮತ್ತು ರಾಜ್ಯ ಖಜಾಂಚಿ ಸ್ಥಾನಕ್ಕೆ ಕೊಪ್ಪಳ ಜಿಲ್ಲಾಧ್ಯಕ್ಷ ನಾಗರಾಜ್ ಜುಮ್ಮಣ್ಣನವರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರೆ, ಮಂಜೇಗೌಡ ಬಣದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿ.ಪಿ.ಕೃಷ್ಣೇಗೌಡ, ಖಜಾಂಚಿ ಸ್ಥಾನಕ್ಕೆ ಶಿವರುದ್ರಯ್ಯ.ವಿ.ವಿ ಸ್ಪರ್ಧಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘ ಒಟ್ಟು 5.25 ಲಕ್ಷ ಸದಸ್ಯರಿದ್ದಾರೆ.