ಒಳ ಮೀಸಲಾತಿ | ನ್ಯಾ. ನಾಗಮೋಹನ್‌ ದಾಸ್ ಆಯೋಗ ರಚಿಸಿದ ರಾಜ್ಯ ಸರ್ಕಾರ

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ‌ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.;

Update: 2024-11-14 06:03 GMT
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್‌. ಎನ್‌ ನಾಗಮೋಹನ್ ದಾಸ್

ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ವರದಿ‌ ಸಲ್ಲಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 

ಒಳ ಮೀಸಲಾತಿ ಜಾರಿ ಮಾಡುವ ನಿಟ್ಟಿನಲ್ಲಿ ಅಗತ್ಯ ದತ್ತಾಂಶವನ್ನು ಎಲ್ಲಿಂದ ಸಂಗ್ರಹ ಮಾಡಬೇಕು ಎಂಬುವುದನ್ನು ಪರಿಶೀಲನೆ ಮಾಡಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚನೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು.

ಸಚಿವ ಸಂಪುಟ ನಿರ್ಧಾರದಂತೆ ಬುಧವಾರ (ನ.13) ನಿವೃತ್ತ ನ್ಯಾ.ಎಚ್‌ ಎನ್ ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಎರಡು‌ ತಿಂಗಳೊಳಗೆ ಸೂಕ್ತ ಶಿಫಾರಸಿನೊಂದಿಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. 

ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಐದು ಪ್ರಮುಖ ಇಲಾಖೆಗಳ ಕಾಮಗಾರಿಗಳಲ್ಲಿ ಶೇ 40ರಷ್ಟು ಕಮಿಷನ್‌ ಪಡೆಯಲಾಗುತ್ತಿತ್ತು ಎಂಬ ಆರೋಪದ ಕುರಿತು ತನಿಖೆ ನಡೆಸುವ ಆಯೋಗದ ನೇತೃತ್ವನ್ನೂ ವಹಿಸಿದ್ದಾರೆ. ಈ ಆಯೋಗವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ 2023ರ ಆಗಸ್ಟ್‌ 5ರಂದು ರಚಿಸಿತ್ತು.

ಇದಕ್ಕೂ ಮುನ್ನ, ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆ ಹಾಗೂ ಪರಿಶಿಷ್ಟ ಪಂಗಡದವರ ಮೀಸಲಾತಿ ಹೆಚ್ಚಳದ ಕುರಿತು ವರದಿ ನೀಡಲೂ ಕೂಡ ನ್ಯಾ. ನಾಗಮೋಹನ ದಾಸ್ ಅವರ ನೇತೃತ್ವದಲ್ಲಿಯೇ ಸಮಿತಿ ರಚಿಸಲಾಗಿತ್ತು.

ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ನೀಡುವ ಮೂಲಕ ಅಸ್ಪೃಶ್ಯ ಜಾತಿಗಳಿಗೆ ಸೇರಿದವರಿಗೆ ನ್ಯಾಯ ಒದಗಿಸಬೇಕೆಂದು ಮೂರು ದಶಕಗಳಿಂದ ಹೋರಾಟ ನಡೆಯುತ್ತಲೇ ಇತ್ತು. ಎಸ್​ಎಂ ಕೃಷ್ಣ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಒಳಮೀಸಲಾತಿ ಬಗ್ಗೆ ಬೇಡಿಕೆ ತೀವ್ರಗೊಂಡಿತ್ತು. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಆಯೋಗ ರಚಿಸುವ ಪ್ರಸ್ತಾವ ಸರ್ಕಾರದ ಮುಂದೆ ಇತ್ತು. ಬಳಿಕ ಅಸ್ತಿತ್ವಕ್ಕೆ ಬಂದ ಧರ್ಮಸಿಂಗ್​ ನೇತೃತ್ವದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ, 2005ರಲ್ಲಿ ಅಧ್ಯಯನ ನಡೆಸಿ ಶಿಫಾರಸು ಮಾಡಲು ನ್ಯಾಯಮೂರ್ತಿ ಎ.ಜೆ ಸದಾಶಿವ ನೇತೃತ್ವದ ಆಯೋಗ ರಚಿಸಿತ್ತು.

ಆಗ ಪರಿಶಿಷ್ಟ ಜಾತಿಗಳಿಗೆ ಇದ್ದ ಶೇ.15ರ ಮೀಸಲಾತಿಯನ್ನು ಎಡಗೈ ಸಮುದಾಯಗಳಿಗೆ ಶೇ.6, ಬಲಗೈ ಸಮುದಾಯಗಳಿಗೆ ಶೇ.5.5, ಅಸ್ಪೃಶ್ಯ ಉಪಜಾತಿಗಳಿಗೆ ಶೇ. 3 ಹಾಗೂ ಈ ಮೂರು ಗುಂಪುಗಳಿಗೆ ಸೇರದ ಜಾತಿಗಳವರಿಗೆ ಶೇ.1ರಷ್ಟು ಮೀಸಲಾತಿ ನೀಡಬಹುದು ಎಂದು ಸದಾಶಿವ ಆಯೋಗವು 2012ರಲ್ಲೇ ಅಂದಿನ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಶಿಫಾರಸು ಮಾಡಿ ವರದಿ ಸಲ್ಲಿಸಿತ್ತು.

Tags:    

Similar News