ಕೇಂದ್ರದ ಯೋಜನೆಗಳಲ್ಲಿ ರಾಜ್ಯದ ಪಾಲು ಅಧಿಕ; ಆದರೆ ಮೋದಿ ಹೆಸರು! ಸಿದ್ದರಾಮಯ್ಯ ಅಸಮಾಧಾನ
ಅನೇಕ ಯೋಜನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಯೋಜನಾ ವೆಚ್ಚದ ಪಾಲು ಭರಿಸುತ್ತವೆ. ಕೆಲವು ಯೋಜನೆಗಳಲ್ಲಿ ರಾಜ್ಯದ ಪಾಲು ಹೆಚ್ಚಿದ್ದರೂ, ಕೇಂದ್ರ ಸರ್ಕಾರ ಪ್ರಚಾರ ಪಡೆಯುತ್ತಿರುವುದಕ್ಕೆ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.;
ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಕೇಂದ್ರ ಸರ್ಕಾರದ ಯೋಜನೆಗಳ ಪೈಕಿ ಕೆಲವು ಯೋಜನೆಗಳಲ್ಲಿ ಕೇಂದ್ರಕ್ಕಿಂತ ರಾಜ್ಯ ಸರ್ಕಾರವೇ ಹೆಚ್ಚು ಅನುದಾನ ನೀಡುತ್ತಿದ್ದರೂ ಕೇಂದ್ರ ಸರ್ಕಾರವೇ ಹೆಚ್ಚು ಪ್ರಚಾರ ಪಡೆಯುತ್ತಿರುವುದಕ್ಕೆ ರಾಜ್ಯ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ಜಲಜೀವನ್ ಮಿಷನ್, ಆಯುಷ್ಮಾನ್ ಯೋಜನೆಗಳಿಗೆ ಕೇಂದ್ರ ಸರ್ಕಾರ ಶೇ. 30 ರಷ್ಟು ಅನುದಾನ ನೀಡುತ್ತಿದ್ದು ರಾಜ್ಯ ಸರ್ಕಾರ ಶೇ. 50 ರಷ್ಟು ಅನುದಾನ ನೀಡುತ್ತಿದೆ. ಆದರೆ ಯೋಜನೆ ಸಂಪೂರ್ಣ ಶ್ರೇಯ ಕೇಂದ್ರ ಸರ್ಕಾರ ಪಡೆಯುತ್ತಿದೆ ಎಂಬುದು ಕರ್ನಾಟಕದ ವಾದವಾಗಿದೆ.
ಬುಧವಾರ (ಜೂ.11) ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೀಡಿರುವ ಜಾಹೀರಾತಿನಲ್ಲಿ ʼಪಿಎಂ-ಕುಸುಮ್ʼ ಯೋಜನೆಯ ಬಗ್ಗೆ ಮಾಹಿತಿ ನೀಡಿದ್ದು ʼಕೇಂದ್ರ ಸರ್ಕಾರದ ಶೇ.30 ರಷ್ಟು ಸಹಾಯಧನದೊಂದಿಗೆʼ ಎಂದು ಪ್ರಕಟಿಸುವ ಮೂಲಕ ಕೇಂದ್ರ ಸರ್ಕಾರ ನೀಡುತ್ತಿರುವ ಅನುದಾನದ ಬಗ್ಗೆ ಕುಟುಕಿದ್ದು, ಈ ಬಗ್ಗೆ ಬಹಿರಂಗ ವೇದಿಕೆಯಲ್ಲಿಯೂ ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜತೆಗೆ ರಾಜ್ಯ ಸರ್ಕಾರ ಯೋಜನೆಗಳ ಬಗ್ಗೆ ಆರೋಪ ಮಾಡುತ್ತಿದ್ದ ಬಿಜಿಪಿಗೆ ನೇರವಾಗಿ ತಿರುಗೇಟು ನೀಡಿದ್ದಾರೆ.
"ರಾಷ್ಟ್ರೀಯ ಆರೋಗ್ಯ ಮಿಷನ್ ಯೋಜನೆಯಡಿ ರಾಜ್ಯ ಸರ್ಕಾರದ ಪಾಲು ಹೆಚ್ಚಿದ್ದರೂ ಆಯುಷ್ಮಾನ್ ಭಾರತ್ ಯೋಜನೆ ಎನ್ನುತ್ತಾರೆ. ಅನೇಕ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿರುತ್ತದೆ. ಕುಸುಮ್-ಬಿ ಯೋಜನೆಯಡಿ ಕೇಂದ್ರದಿಂದ ಶೇ. 30 ಪಾಲು ನೀಡುತ್ತಿದೆ. ರೈತರಿಗೆ ಒಳ್ಳೆಯದಾಗಬೇಕು, ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕೆಂಬ ಉದ್ದೇಶದಿಂದ ಇದನ್ನು ಒಪ್ಪಿಕೊಳ್ಳಬೇಕಾಗುತ್ತದೆ," ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕುಸುಮ್ ಸಿ ಯೋಜನೆ
ಬುಧವಾರ (ಜೂ.11) ಗೌರಿಬಿದನೂರಿನಲ್ಲಿ ʼಕುಸುಮ್-ಸಿʼ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ʼಜಲ ಜೀವನ್ʼ ಯೋಜನೆಯಡಿ ರಾಜ್ಯ ಸರ್ಕಾರ ಶೇ. 50 ಅನುದಾನ ನೀಡಿದರೆ ಕೇಂದ್ರ ಸರ್ಕಾರ ಶೇ. 30 ಅನುದಾನ ನೀಡುತ್ತದೆ ಹಾಗೂ ಶೇ.20 ಪಾಲು ಫಲಾನುಭವಿಗಳದಾಗಿದೆ. ಈ ಯೋಜನೆಯಡಿ ಡಿಸೆಂಬರ್ ವೇಳೆಗೆ 2,400 ಮೆಗಾವ್ಯಾಟ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಇದರಿಂದ ರೈತರಿಗೆ ಹಗಲಿನಲ್ಲಿಯೂ ವಿದ್ಯುತ್ ನೀಡಲು ಅನುಕೂಲವಾಗಲಿದೆ ಎಂದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ
ರಾಜ್ಯದ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ. ಗ್ಯಾರಂಟಿ ಯೋಜನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಅನುದಾನ ಒದಗಿಸಲಾಗಿದೆ. ಕಳೆದ ವರ್ಷ 52,000 ಕೋಟಿ ರೂ. ಗಳ ಬಂಡವಾಳ ವೆಚ್ಚ ಇತ್ತು. ಈ ವರ್ಷ 83,000 ಕೋಟಿ ರೂ. ಆಗಿದೆ ಎಂದರು. 31,000 ಕೋಟಿ ಬಂಡವಾಳ ವೆಚ್ಚ ಒಂದು ವರ್ಷದಲ್ಲಿ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರ ದಿವಾಳಿ ಹೇಗೆ ಆಗುತ್ತದೆ. ಗ್ಯಾರಂಟಿ ಯೋಜನೆಗಳಿಗೆ 50,000 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದರು.
242 ಭರವಸೆಗಳನ್ನು ಈಡೇರಿಸಿದ್ದೇವೆ
ನಮ್ಮ ಸರ್ಕಾರ ಎರಡು ವರ್ಷಗಳಲ್ಲಿ 593 ಭರವಸೆಗಳಲ್ಲಿ 242 ಭರವಸೆಗಳನ್ನು ಈಡೇರಿಸಿದ್ದೇವೆ. ಕೇಂದ್ರ ಸರ್ಕಾರ 600 ಭರವಸೆಗಳನ್ನು ನೀಡಿ ಶೇ.10ರಷ್ಟನ್ನೂ ಅನುಷ್ಠಾನ ಮಾಡಿಲ್ಲ ಎಂದು ತಿಳಿಸಿದರು.
ಬಿಜೆಪಿಯಿಂದ ಸುಳ್ಳು ಮಾಹಿತಿ
"ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜೀನಾಮೆ ಕೇಳುವುದು ಅಭ್ಯಾಸವಾಗಿದೆ. ಬಿಜೆಪಿ ಎಲ್ಲದರಲ್ಲೂ ರಾಜಕೀಯ ಮಾಡುತ್ತದೆ. ಕುಂಭ ಮೇಳದಲ್ಲಿ 40ರಿಂದ 50 ಜನ ಕಾಲ್ತುಳಿತದಲ್ಲಿ ಮೃತಪಟ್ಟಿದ್ದರು. ಆಗ ಅಲ್ಲಿನ ಮುಖ್ಯಮಂತ್ರಿಗಳ ರಾಜೀನಾಮೆ ಕೇಳಿದರೇ? ಸೇತುವೆಯೊಂದು ಉದ್ಘಾಟನೆಯಾದ ದಿನವೇ ಬಿದ್ದು 140 ಜನ ಮೃತಪಟ್ಟಿದ್ದರು. ಆಗ ಪ್ರಧಾನಿಗಳ ರಾಜಿನಾಮೆ ಕೇಳಿದರೇ ? ಗೋಧ್ರಾ ಹತ್ಯಾಕಾಂಡದಲ್ಲಿ ಎಷ್ಟು ಜನ ಮೃತಪಟ್ಟರು. ಆಗ ಗುಜರಾತ್ ಮುಖ್ಯಮಂತ್ರಿಯಾಗಿದ್ದವರ ರಾಜಿನಾಮೆ ಕೇಳಿದರೇ? ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಸರಬರಾಜು ಮಾಡದೇ 23 ಜನ ಮೃತಪಟ್ಟಾಗ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಿದ್ದರೆ?" ಎಂದು ಪ್ರಶ್ನಿಸಿದರು.
ಕಾಂಗ್ರೆಸ್ನ ಹಲವು ನಾಯಕರ ಮೇಲೆ ಇಡಿ ದಾಳಿ ಮಾಡಿದ್ದು, ಯಾವುದೇ ಕಾನೂನಿನ ಉಲ್ಲಂಘನೆಯಾಗಿದ್ದರೆ ಅದಕ್ಕೆ ನಾವು ಬೆಂಬಲಿಸುವುದಿಲ್ಲ. ಕಾನೂನು ಪ್ರಕಾರವಾಗಿ ಕ್ರಮ ಕೈಗೊಳ್ಳಲಿ. ಕಾನೂನಿನ ಅನುಷ್ಠಾನಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದರು.