ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕಲ್ಲು ತೂರಾಟ: 8 ಮಂದಿಗೆ ಗಾಯ, 21 ಜನ ವಶಕ್ಕೆ
ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ.;
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಭಾನುವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಘಟನೆಯಲ್ಲಿ ನಾಲ್ವರು ಗೃಹ ರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಎಂಟು ಮಂದಿ ಗಾಯಗೊಂಡಿದ್ದು, ಈ ಸಂಬಂಧ ಪೊಲೀಸರು 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಪಟ್ಟಣದಲ್ಲಿ ಪರಿಸ್ಥಿತಿ ಬೂದಿಮುಚ್ಚಿದ ಕೆಂಡದಂತಿದೆ.
ತಮಿಳು ಕಾಲೋನಿ ಯುವಕರು ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯು ರಾಮ್ ರಹೀಮ್ ನಗರದ ಮಸೀದಿಯ ಬಳಿ ಹಾದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಮಸೀದಿಯ ಬಳಿ ಘೋಷಣೆ ಕೂಗಬಾರದು ಅಥವಾ ಮೈಕ್ ಬಳಸಬಾರದು ಎಂದು ಮೊದಲೇ ಸೂಚನೆ ನೀಡಲಾಗಿದ್ದರಿಂದ, ಮೆರವಣಿಗೆಯಲ್ಲಿದ್ದವರು ಮೈಕ್ ಆಫ್ ಮಾಡಿದ್ದರು. ಆದರೂ, ಏಕಾಏಕಿ ಬೀದಿ ದೀಪಗಳನ್ನು ಆರಿಸಿ, ಮಸೀದಿಯ ಕಡೆಯಿಂದ ಕಲ್ಲು ಮತ್ತು ದೊಣ್ಣೆಗಳನ್ನು ಎಸೆಯಲಾಗಿದೆ ಎಂದು ಮೆರವಣಿಗೆಯಲ್ಲಿದ್ದವರು ಆರೋಪಿಸಿದ್ದಾರೆ.
ಘಟನಾ ಸ್ಥಳಕ್ಕೆ ತಕ್ಷಣ ಭೇಟಿ ನೀಡಿದ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಈ ಸಂಬಂಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದ್ದು, 21 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆರೋಪಿಗಳಲ್ಲಿ ಹೆಚ್ಚಿನವರು ಸ್ಥಳೀಯರಾಗಿದ್ದು, ಇಬ್ಬರು ಚನ್ನಪಟ್ಟಣದವರು ಎಂದು ತಿಳಿದುಬಂದಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಮದ್ದೂರು ಪಟ್ಟಣದಲ್ಲಿ ಮಂಗಳವಾರ ಬೆಳಿಗ್ಗೆಯವರೆಗೆ ನಿಷೇಧಾಜ್ಞೆ (ಸೆಕ್ಷನ್ 144) ಜಾರಿಗೊಳಿಸಲಾಗಿದೆ ಹಾಗೂ ಪೊಲೀಸರಿಂದ ಪಥಸಂಚಲನ ನಡೆಸಲಾಗುವುದು ಎಂದು ಎಸ್ಪಿ ತಿಳಿಸಿದ್ದಾರೆ. ಕಳೆದ ವರ್ಷ ನಾಗಮಂಗಲದಲ್ಲಿ ಇದೇ ರೀತಿಯ ಘಟನೆ ನಡೆದಿದ್ದು, ಇದೀಗ ಜಿಲ್ಲೆಯಲ್ಲಿ ಮತ್ತೊಂದು ಕೋಮು ಸೂಕ್ಷ್ಮ ಘಟನೆ ಮರುಕಳಿಸಿದೆ.