ಬೀದಿ ನಾಯಿ ಹಾವಳಿ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಲೋಕಾಯುಕ್ತ

Update: 2025-08-05 04:39 GMT

ನಗರದಲ್ಲಿ ಕ್ರೂರ ಪ್ರವೃತ್ತಿಯ ಬೀದಿ ನಾಯಿಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಶ್ವಾನ ನಿಗಾ ಕೇಂದ್ರದಲ್ಲಿ ಇಡದೆ ನಿರ್ಲಕ್ಷ್ಯ ತೋರಿದ ಅಧಿಕಾರಿಗಳನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೊಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಟೆಲಿಕಾಂ ಲೇಔಟ್​ನಲ್ಲಿ ಬೀದಿ ನಾಯಿಗಳ ದಾಳಿಯಿಂದ ಸೀತಪ್ಪ ಎಂಬುವವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಅಧಿಕಾರಿಗಳ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

"ಶ್ವಾನ ನಿಗಾ ಕೇಂದ್ರಗಳನ್ನು ಸ್ಥಾಪಿಸುವಂತೆ ಈ ಹಿಂದೆಯೇ ಸಾಕಷ್ಟು ಬಾರಿ ಮಾರ್ಗದರ್ಶನ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್​​ ಆದೇಶಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ," ಎಂದು ಬೇಸರ ವ್ಯಕ್ತಪಡಿಸಿದ ನ್ಯಾಯಮೂರ್ತಿಗಳು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ನಿಗಾ ಕೇಂದ್ರ ಸ್ಥಾಪನೆ ಭರವಸೆ

ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತರು, ಯಲಹಂಕದಲ್ಲಿ 15 ದಿನಗಳೊಳಗೆ 50 ನಾಯಿಗಳ ಸಾಮರ್ಥ್ಯದ ನಿಗಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಬೀದಿ ನಾಯಿಗಳ ದಾಳಿಯಿಂದ ಸಂಭವಿಸುತ್ತಿರುವ ಸಾವುಗಳನ್ನು ಗಂಭೀರವಾಗಿ ಪರಿಗಣಿಸಿದ ಲೋಕಾಯುಕ್ತರು, ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒಗಳು ಹಾಗೂ ಮಹಾನಗರ ಪಾಲಿಕೆ ಆಯುಕ್ತರನ್ನು ಪ್ರಕರಣದಲ್ಲಿ ಪಕ್ಷಗಾರರನ್ನಾಗಿ ಮಾಡಲು ಸೂಚಿಸಿದರು. ಒಂದು ವರ್ಷದೊಳಗೆ ಬೀದಿ ನಾಯಿ ಕಡಿತ ಪ್ರಕರಣಗಳು, ರೇಬಿಸ್, ಲಸಿಕೆ, ಸಂತಾನಹರಣ ಶಸ್ತ್ರಚಿಕಿತ್ಸೆ (ಎಬಿಸಿ) ಮತ್ತು ಶ್ವಾನ ತಾಣಗಳ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಿದರು.

ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ನಿಗದಿಪಡಿಸಿದ್ದು, ಮೃತ ಸೀತಪ್ಪ ಅವರ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡಬೇಕೆಂದು ಸೂಚಿಸಿದರು.

Tags:    

Similar News