ಮಳವಳ್ಳಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಸಾವು; ಮಾಹಿತಿ ಪಡೆದ ಕೇಂದ್ರ ಸಚಿವ ಎಚ್​​ಡಿಕೆ

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.;

Update: 2025-03-16 11:49 GMT

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆಯಲ್ಲಿ ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದ ಸಚಿವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿ ವಿಚಾರಿಸಿಕೊಂಡರು.

ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವ ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಿದ ಸಚಿವರು; ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಘಟನೆ ಬಗ್ಗೆ ನನಗೆ ಮಾಹಿತಿ ಬಂದಾಗ ತೀವ್ರ ಆಘಾತ ಉಂಟಾಯಿತು. ಈ ವಸತಿ ಶಾಲೆಯಲ್ಲಿ ಬಹುತೇಕ ಹೊರರಾಜ್ಯಗಳ ಮಕ್ಕಳೇ ಇದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Similar News