ಸುಹಾಸ್ ಶೆಟ್ಟಿ ಹತ್ಯೆ: ಆರೋಪಿಗಳ ಸುಳಿವು ಪತ್ತೆ, ಎಡಿಜಿಪಿ ಆರ್. ಹಿತೇಂದ್ರ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗಾಗಿ ಎಡಿಜಿಪಿ ಆರ್. ಹಿತೇಂದ್ರ ಅವರು ಮಂಗಳೂರಿಗೆ ಆಗಮಿಸಿದ್ದು, ಪೊಲೀಸ್ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.;

Update: 2025-05-02 08:06 GMT

ಮಂಗಳೂರಿನ ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೇ 1ರ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಸುಳಿವು ದೊರೆತಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್. ಹಿತೇಂದ್ರ ತಿಳಿಸಿದ್ದಾರೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿರುವ ಅವರು, ಸಾರ್ವಜನಿಕರು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Full View

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗಾಗಿ ಎಡಿಜಿಪಿ ಆರ್. ಹಿತೇಂದ್ರ ಅವರು ಮಂಗಳೂರಿಗೆ ಆಗಮಿಸಿದ್ದು, ಪೊಲೀಸ್ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. "ಆರೋಪಿಗಳ ಬಗ್ಗೆ ಸುಳಿವುಗಳು ದೊರೆತಿದ್ದು, ಅವರ ಹೆಸರುಗಳನ್ನು ಸಹ ಗುರುತಿಸಲಾಗಿದೆ. ಶೀಘ್ರವೇ ಅವರನ್ನು ಬಂಧಿಸಲಾಗುವುದು," ಎಂದು ಹಿತೇಂದ್ರ ಮಾಧ್ಯಮಗಳಿಗೆ ತಿಳಿಸಿದರು. ಈ ಪ್ರಕರಣದ ತನಿಖೆಗಾಗಿ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಹು ತಂಡಗಳು ಕಾರ್ಯನಿರ್ವಹಿಸುತ್ತಿವೆ.

ದಕ್ಷಿಣ ಕನ್ನಡದಲ್ಲಿ ಉದ್ರಿಕ್ತ ಪರಿಸ್ಥಿತಿ

ಈ ಘಟನೆಯ ಬಳಿಕ ಮಂಗಳೂರಿನಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಶಾಂತಿ ಕಾಪಾಡಲು ಪೊಲೀಸರು ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ. 22 ಕೆಎಸ್​ಆರ್​​ಪಿ ಪ್ಲಾಟೂನ್‌ಗಳು, 1,000 ಪೊಲೀಸ್ ಸಿಬ್ಬಂದಿ ಮತ್ತು ಐವರು ಎಸ್‌ಪಿ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಅವರು ಮೇ 2ರ ಬೆಳಗ್ಗೆ 6 ಗಂಟೆಯಿಂದ ಮೇ 6ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕ ಸಭೆಗಳು, ಮೆರವಣಿಗೆಗಳು, ಘೋಷಣೆ ಕೂಗುವಿಕೆ ಮತ್ತು ಭಾಷಣಗಳ ಮೇಲೆ ನಿಷೇಧ ಹೇರಲಾಗಿದೆ.

ಸುಹಾಸ್ ಶೆಟ್ಟಿ ಯಾರು?

ಸುಹಾಸ್ ಶೆಟ್ಟಿ, ಒಬ್ಬ ರೌಡಿಶೀಟರ್ ಮತ್ತು 2022ರಲ್ಲಿ ನಡೆದ ಮೊಹಮ್ಮದ್ ಫಾಸಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಮೇ 1ರ ರಾತ್ರಿ 8:27ರ ಸುಮಾರಿಗೆ ಬಜಪೆಯ ಕಿನ್ನಿಪದವು ಕ್ರಾಸ್ ಬಳಿ ಆತ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಮತ್ತು ಶಶಾಂಕ್ ಎಂಬವರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, 5-6 ಜನರ ಗುಂಪು ಸ್ವಿಫ್ಟ್ ಕಾರು ಮತ್ತು ಪಿಕಪ್ ಟ್ರಕ್‌ನಲ್ಲಿ ಬಂದು ದಾಳಿ ನಡೆಸಿದರು. ದುಷ್ಕರ್ಮಿಗಳು ಸುಹಾಸ್‌ನನ್ನು ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಗಾಯಗೊಳಿಸಿದರು. ಆತನನ್ನು ಎ.ಜೆ. ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆತ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು.

ಪ್ರತೀಕಾರದ ದಾಳಿಗಳ ಆತಂಕ

ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಪ್ರತೀಕಾರದ ದಾಳಿಗಳು ನಡೆಯುತ್ತಿವೆ ಎಂಬ ಆತಂಕ ಸೃಷ್ಟಿಯಾಗಿದೆ. ಉಡುಪಿ ತಾಲೂಕಿನ ಅತ್ರಾಡಿಯಲ್ಲಿ ಶುಕ್ರವಾರ ಮುಸ್ಲಿಂ ಆಟೋ ಚಾಲಕ ಅಬೂಬಕ್ಕರ್ ಎಂಬುವರ ಮೇಲೆ ಕೊಲೆ ಯತ್ನ ನಡೆದಿದೆ. ಆರೋಪಿಗಳಾದ ಸುಶಾಂತ್ ಮತ್ತು ಸಂದೇಶ್ ಪೂಜಾರಿ ಎಂಬವರು ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಈ ಕೃತ್ಯವನ್ನು ಎಸಗಿರುವುದಾಗಿ ಪೊಲೀಸ್ ವಿಚಾರಣೆಯಲ್ಲಿ ಒಪ್ಪಿಕೊಂಡಿದ್ದಾರೆ. ಇವರನ್ನು ಹಿರಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಇದೇ ದಿನ ಮಂಗಳೂರಿನ ಕಣ್ಣೂರಿನಲ್ಲಿ ನೌಷಾದ್ ಎಂಬ ಯುವಕನಿಗೆ ಚೂರಿ ಇರಿತವಾಗಿದ್ದು, ಆತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ರಾಜಕೀಯ ಮತ್ತು ಸಾಮಾಜಿಕ ಪರಿಣಾಮ

ಸುಹಾಸ್ ಶೆಟ್ಟಿ ಹತ್ಯೆಯ ಬಗ್ಗೆ ವಿಶ್ವ ಹಿಂದೂ ಪರಿಷತ್ (VHP) ಮತ್ತು ಬಜರಂಗದಳ ಸಂಘಟನೆಗಳು ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 2ರಂದು ಬಂದ್‌ಗೆ ಕರೆ ನೀಡಿವೆ. ಈ ಬಂದ್‌ನಿಂದಾಗಿ ಮಂಗಳೂರಿನಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಅಂಗಡಿಗಳು ಮುಚ್ಚಿವೆ

Similar News