Prajwal Pendrive Case: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಇದರಿಂದ, ಪ್ರಜ್ವಲ್ ರೇವಣ್ಣಗೆ ಸದ್ಯ ಜೈಲುವಾಸದಿಂದ ಬಿಡುಗಡೆಯಿಲ್ಲ.;
ಮನೆಕೆಲಸದಾಕೆ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಜೈಲು ವಾಸ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಯನ್ನು ಸೋಮವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮೂರು ಪ್ರಕರಣಗಳಲ್ಲಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ರಾಜ್ಯ ಹೈಕೋರ್ಟ್ ವಜಾಗೊಳಿಸಿದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ಇದರಿಂದ, ಪ್ರಜ್ವಲ್ ರೇವಣ್ಣಗೆ ಜೈಲುವಾಸವೇ ಕಾಯಂ ಆಗಿದೆ.
ಪ್ರಜ್ವಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹ್ಟಗಿ ಅವರು, ಆರೋಪಿಯು ಲೋಕಸಭಾ ಚುನಾವಣೆಗೆ ಸ್ಪರ್ಧಿಸದಂತೆ ತಡೆಯಲು ಅತ್ಯಾಚಾರದ ಆರೋಪ ಮಾಡಲಾಗಿದೆ ಎಂದು ನ್ಯಾಯಪೀಠದ ಗಮನ ಸೆಳೆದರು. ಇದನ್ನು ಮಾನ್ಯ ಮಾಡದ ನ್ಯಾಯಪೀಠ, ಆರೋಪಿ ವಿರುದ್ಧದ ಕೇಳಿ ಬಂದಿರುವ ಆರೋಪಗಳು ಗಂಭೀರವಾಗಿದೆ. ಅಲ್ಲದೇ ಆರೋಪಿಯು ಪ್ರಭಾವಿ ವ್ಯಕ್ತಿಯಾಗಿರುವ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗದು ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿತು.
ಕಳೆದ ಅ.21 ರಂದು ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಜ್ವಲ್ ರೇವಣ್ಣ ಎರಡು ಪ್ರಕರಣಗಳಿಗೆ ಸಂಬಂಧಿಸಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದರು. ಇದನ್ನು ಪ್ರಶ್ನಿಸಿ ಪ್ರಜ್ವಲ್ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
2024 ಆಗಸ್ಟ್ ತಿಂಗಳಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿತ್ತು. ನಾಲ್ಕು ಪ್ರಕರಣಗಳ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ 2,144 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು.