ಅಸಹಜ ಲೈಂಗಿಕ ಕಿರುಕುಳ ಪ್ರಕರಣ| ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ ಆಗಿದೆ.

Update: 2024-07-09 14:00 GMT
ಸೂರಜ್‌ ರೇವಣ್ಣ ಅವರ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ.

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತನಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ಜಾಮೀನು ಅರ್ಜಿ ವಜಾ ಆಗಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣದ ಸಂಬಂಧ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದೆ.

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯದಡಿ ಹೊಳೆನರಸಿಪುರ‌ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಡಿ ಸೂರಜ್ ಅವರನ್ನು ಜೂನ್ 23ರಂದು ಬಂಧಿಸಲಾಗಿತ್ತು. ಬಳಿಕ ಪ್ರಕರಣದ ವಿಚಾರಣೆ ಸಿಐಡಿಗೆ ವರ್ಗಾವಣೆಯಾಗಿತ್ತು.‌ ಇದಾದ ಕೆಲವೇ ದಿನಗಳಲ್ಲಿ ಮತ್ತೊಬ್ಬ ಸಂತ್ರಸ್ತ ಸೂರಜ್ ವಿರುದ್ಧ ದೂರು ನೀಡಿದ್ದರು. ಎರಡೂ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಿಐಡಿ‌ ಪೊಲೀಸರು ವಿಚಾರಣೆ ನಡೆಸಿದ ಬಳಿಕ‌ ಸೂರಜ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ‌ ಒಪ್ಪಿಸಿತ್ತು.

ಈ ಮಧ್ಯೆ ಜಾಮೀನು ಕೋರಿ ಸೂರಜ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿತು. ಅರ್ಜಿದಾರರ‌ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ ಸಿಆರ್ ಪಿಸಿ ಸೆಕ್ಷನ್ 437ರಡಿ ತಮ್ಮ ಕಕ್ಷಿದಾರರಿಗೆ ಜಾಮೀನು ಮಂಜೂರು ಮಾಡಬೇಕೆಂದು ಮನವಿ ಮಾಡಿದರು.

ಇದಕ್ಕೆ ಸರ್ಕಾರಿ ಪರ ವಕೀಲರು ಆಕ್ಷೇಪಿಸಿದರು. ಇಬ್ಬರ ವಾದ ಮಂಡನೆ ಬಳಿಕ ನ್ಯಾ.ಕೆ.ಎನ್.ಶಿವಕುಮಾರ್ ಜಾಮೀನು‌ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದರು. ಹೀಗಾಗಿ ಜುಲೈ 18ರವರೆಗೆ ಸೂರಜ್ ಜೈಲಿನಲ್ಲಿ ಉಳಿಯಬೇಕಾಗಿದೆ.

Tags:    

Similar News